Home News ೧.೫ ಕೋಟಿ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿ

೧.೫ ಕೋಟಿ ವೆಚ್ಚದ ರಸ್ತೆ ಅಗಲೀಕರಣ ಕಾಮಗಾರಿ

0

ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವ ಯಾವುದೇ ಕಾಮಗಾರಿಗಳನ್ನು ಉಪೇಕ್ಷಿಸದೆ ಸಾರ್ವಜನಿಕ ಆಸ್ತಿ ಎನ್ನುವ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತಾತಹಳ್ಳಿ ಗ್ರಾಮದಲ್ಲಿ ಶನಿವಾರ ಲೋಕೋಪಯೋಗಿ ಇಲಾಖೆಯಿಂದ ೧.೫ ಕೋಟಿ ವೆಚ್ಚದ ಶಿಡ್ಲಘಟ್ಟ- ಪಲಿಚೇರ್ಲು ರಸ್ತೆ ಅಗಲೀಕರಣ ಹಾಗೂ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಸಾರ್ವಜನಿಕರ ಸಹಕಾರವಿದ್ದಾಗ ಮಾತ್ರವೇ ಸರ್ಕಾರದ ಯಾವುದೆ ಯೋಜನೆ ಯಶಸ್ವಿಯಾಗಲು ಸಾಧ್ಯ. ಗ್ರಾಮದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳ ಗುಣಮಟ್ಟದಲ್ಲಿ ನಾಗರೀಕರು ರಾಜಿಯಾಗದೇ ಉತ್ತಮ ಗುಣಮಟ್ಟದ ಕಾಮಗಾರಿಯಾಗುವಂತೆ ನೋಡಿಕೊಳ್ಳಬೇಕು ಎಂದರು.
ಗ್ರಾಮಗಳಲ್ಲಿ ಕಾಮಗಾರಿ ನಡೆಯುವಾಗ ಸಣ್ಣ ಪುಟ್ಟ ಸಮಸ್ಯೆಗಳು ಎದುರಾದಲ್ಲಿ ತಾವೇ ಬಗೆಹರಿಸಿಕೊಳ್ಳುವ ಮೂಲಕ ಗ್ರಾಮದ ಅಭಿವೃದ್ಧಿಗೆ ಸಹಕರಿಸಬೇಕು. ಗ್ರಾಮಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಇದರಿಂದ ಆರೋಗ್ಯವೂ ಸುಧಾರಿಸುತ್ತದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತಿ ಸದಸ್ಯರಾದ ಬಂಕ್ ಮುನಿಯಪ್ಪ, ಲೋಕೋಪಯೋಗಿ ಇಲಾಖೆಯ ಎಇಇ ಆರ್. ಲೋಕೇಶ್, ದೇವರಮಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ, ಸದಸ್ಯರಾದ ಮಳ್ಳೂರಯ್ಯ, ವೀರಾಪುರ ಮುನಿರೆಡ್ಡಿ, ನಗರಸಭೆ ಸದಸ್ಯರಾದ ಅಪ್ಸರ್ಪಾಷ, ಲಕ್ಷ್ಮಯ್ಯ, ಮುಖಂಡರಾದ ಶ್ರೀಧರ, ಲಕ್ಷ್ಮಿನಾರಾಯಣ, ಸೋಮಶೇಖರ್, ಗಣೇಶ್, ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.