ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಸಹಯೋಗದಲ್ಲಿ ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ೬೩ ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕನ್ನಡ ಧ್ವಜಾರೋಹಣ ಮಾಡಿ, ಮೆರವಣಿಗೆಗೆ ಚಾಲನೆ ನೀಡಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ಹೆಮ್ಮೆಪಡುವಂತಹ ಪರಂಪರೆ ಮತ್ತು ಐತಿಹ್ಯವನ್ನು ಹೊಂದಿರುವ ಕನ್ನಡಿಗರಾದ ನಾವು ನಮ್ಮ ನಾಡು, ನುಡಿಯ ರಕ್ಷಣೆಗೆ ಮುಂದಾಗೋಣ. ಗಡಿಭಾಗದ ಜನರ ಜವಾಬ್ದಾರಿ ಹೆಚ್ಚಿದ್ದು, ಮಾತೃ ಭಾಷೆಯ ಅಭಿವೃದ್ಧಿಗಾಗಿ ಎಲ್ಲರೂ ಶ್ರಮಿಸಬೇಕು ಎಂದು ಅವರು ಹೇಳಿದರು.
ಕನ್ನಡ ಭಾಷೆಗೆ ಬಹಳ ವೈಭವಯುತ ಹಿನ್ನೆಲೆಯಿದೆ. ದೇಶಕ್ಕೆ ಅನೇಕ ಮಂದಿ ದಿಗ್ಗಜರನ್ನು, ಸಾಧಕರನ್ನು ಕೊಡುಗೆಯಾಗಿ ನೀಡಿರುವಂತಹ ನಾಡಿನಲ್ಲಿ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಿ ಎಂದು ಹೇಳುವ ನಾವೇ ನಮ್ಮ ಮಾತೃಭಾಷೆಯಾದ ಕನ್ನಡವನ್ನು ಕಡೆಗಣಿಸುತ್ತಿದ್ದೇವೆ. ಅದು ಆಗಬಾರದು ಎಂದರು.
ನೆರೆ ರಾಜ್ಯಗಳಿಗೆ ಹೋದರೆ ಅಲ್ಲಿನ ಸ್ಥಳೀಯ ಭಾಷೆಯಲ್ಲಿಯೆ ವ್ಯವಹರಿಸಬೇಕಾಗುತ್ತದೆ. ಪ್ರಾಚೀನ ಭಾಷೆಯಾದ ಕನ್ನಡವನ್ನು ನಮ್ಮ ರಾಜ್ಯದ ಗಡಿ ಭಾಗಗಳಲ್ಲಿ ಉಳಿಸಿಕೊಳ್ಳಲು ಹೋರಾಟದ ಹಾದಿ ಹಿಡಿದಿರುವುದು ಶೋಚನೀಯ ಸಂಗತಿಯಾಗಿದೆ ಎಂದರು.
ನಾವು ವರ್ಷಕ್ಕೊಮ್ಮೆ ರಾಜ್ಯೋತ್ಸವದ ಹೆಸರಿನಲ್ಲಿ ಹಬ್ಬ ಆಚರಿಸಿದ ಮಾತ್ರಕ್ಕೆ ಭಾಷೆ ಉಳಿಯುವುದಿಲ್ಲ ಬದಲಿಗೆ ಪ್ರತಿಯೊಬ್ಬರೂ ಕನ್ನಡ ಭಾಷೆಯನ್ನು ಮಾತನಾಡುವುದು ಹಾಗೂ ಮಾತೃಭಾಷೆಯಲ್ಲಿ ವ್ಯವಹರಿಸಿದಾಗ ಮಾತ್ರ ಭಾಷೆ ಉಳಿಯುತ್ತದೆ ಎಂದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ನಾಡಿನ ಹಿರಿಮೆ ಗರಿಮೆಗಳನ್ನು ಸಾರುವ ಜಾನಪದ ಕಲಾ ಪ್ರದರ್ಶನ, ಮಂಗಳ ವಾದ್ಯಗಳೊಡನೆ ಭುವನೇಶ್ವರಿಯ ಮೆರವಣಿಗೆಯನ್ನು ಆಯೋಜಿಸಲಾಗಿತ್ತು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಇದೇ ಮೊದಲ ಭಾರಿಗೆ ವೇದಿಕೆ ಕಾರ್ಯಕ್ರಮ ರದ್ದುಗೊಳಿಸಿ ನಗರದ ಆಶಾಕಿರಣ ಅಂಧಮಕ್ಕಳಿಗೆ ತಾಲ್ಲೂಕು ಆಡಳಿತದಿಂದ ಹೊದಿಕೆಗಳನ್ನು ವಿತರಿಸಲಾಯಿತು.
ತಹಸೀಲ್ದಾರ್ ಎಸ್.ಅಜಿತ್‌ಕುಮಾರ್ ರೈ, ನಗರಸಭೆ ಪೌರಾಯುಕ್ತ ಜಿ.ಎನ್.ಚಲಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರಬಾಬು, ರೈತ ಸಂಘದ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್, ಕಸಾಪ ಅಧ್ಯಕ್ಷ ಎ.ಎಂ.ತ್ಯಾಗರಾಜು, ಕಾರ್ಯದರ್ಶಿ ಸತೀಶ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಜರಿದ್ದರು.
- Advertisement -
- Advertisement -
- Advertisement -