Home News ಅಂಗವಿಕಲರಿಗೆ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಿ – ತಹಶೀಲ್ದಾರ್ ಎಸ್.ಅಜಿತ್‌ಕುಮಾರ್ ರೈ

ಅಂಗವಿಕಲರಿಗೆ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಿ – ತಹಶೀಲ್ದಾರ್ ಎಸ್.ಅಜಿತ್‌ಕುಮಾರ್ ರೈ

0

ನಗರದ ತಾಲ್ಲೂಕು ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ ಅಂಗವಿಕಲರ ಕುಂದುಕೊರತೆ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ತಹಶೀಲ್ದಾರ್ ಎಸ್.ಅಜಿತ್‌ಕುಮಾರ್ ರೈ ಮಾತನಾಡಿದರು.
ಅಂಗವಿಕಲರಿಗೆ ಸರ್ಕಾರದಿಂದ ಬರುವ ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.
ಅಂಗವಿಕಲರು ಸಮಾಜದ ಮುಖ್ಯವಾಹಿನಿಗೆ ಬರಲಿ ಎಂಬ ಉದ್ದೇಶದಿಂದ ಸರ್ಕಾರ ವಿವಿಧ ಯೋಜನೆಗಳನ್ನು ರೂಪಿಸಿದೆಯಾದರೂ ಅರ್ಹರಿಗೆ ತಲುಪುತ್ತಿಲ್ಲ ಎಂಬ ಆರೋಪಗಳಿವೆ. ಹಾಗಾಗಿ ಅರ್ಹರನ್ನು ಗುರುತಿಸಿ ಸವಲತ್ತು ಕಲ್ಪಿಸಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.
ವಿಕಲಚೇತನ ರಕ್ಷಣಾ ವೇಧಿಕೆ ಜಿಲ್ಲಾಧ್ಯಕ್ಷ ಸಂತೋಷ್ ಮಾತನಾಡಿ, ನಗರದ ತಾಲ್ಲೂಕು ಕಚೇರಿಯಲ್ಲಿ ವಿವಿಧ ಯೋಜನೆಗಳ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಲು ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ವೃದ್ದರೂ ಸೇರಿದಂತೆ ವಿಕಲಚೇತನರಿಗಾಗಿ ಪ್ರತ್ಯೇಕ ಕೊಠಡಿ ನಿರ್ಮಿಸಿದಲ್ಲಿ ನೇರವಾಗಿ ಫಲಾನುಭವಿಯೇ ಬಂದು ಅರ್ಜಿ ಸಲ್ಲಿಸಲು ಸಹಕಾರಿಯಾಗುತ್ತದೆ. ವಿಕಲಚೇತನರ ಮಾಸಾಸನ ನೇರವಾಗಿ ಫಲಾನುಭವಿಯ ಬ್ಯಾಂಕ್ ಖಾತೆಗೆ ಹೋಗುವಂತೆ ಕ್ರಮ ಜರುಗಿಸಬೇಕು, ವಿಕಲಚೇತನರ ಹೆಸರಿನಲ್ಲಿ ನಕಲಿ ಚೇತನರ ಹಾವಳಿ ಹೆಚ್ಚಾಗಿದ್ದು ಕೂಲಂಕುಷವಾಗಿ ಪರಿಶೀಲನೆ ನಡೆಸಿ ಅರ್ಹರಿಗೆ ಸವಲತ್ತು ಸಿಗುವಂತೆ ಮಾಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಿದರು.
ಮುಂಬರುವ ದಿನಗಳಲ್ಲಿ ತಿಂಗಳಿಗೊಮ್ಮೆ ಅಂಗವಿಕಲರ ಕುಂದುಕೊರತೆ ಸಭೆ ಕರೆದು ಚರ್ಚಿಸಲು ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ತಹಸೀಲ್ದಾರ್ ಎಸ್.ಅಜಿತ್‌ಕುಮಾರ್ ರೈ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ಜಿ.ಎಸ್.ಚಲಪತಿ, ತಾಲ್ಲೂಕು ಪಂಚಾಯಿತಿ ವ್ಯವಸ್ಥಾಪಕ ಪ್ರಸಾದ್, ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ.ವಿಜಯ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಅನಸೂಯಮ್ಮ, ಶಿಶು ಅಭಿವೃದ್ದಿ ಅಧಿಕಾರಿ ಲಕ್ಷ್ಮಿದೇವಮ್ಮ ಹಾಜರಿದ್ದರು.

error: Content is protected !!