ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಮುಂದೆ ರೈತ ನಾಯಕ ಪ್ರೊ.ನಂಜುಂಡಸ್ವಾಮಿ ಸ್ಥಾಪಿತ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಕಳೆದ ೧೨ ದಿನಗಳಿಂದ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪ್ರತಿಭಟನಾ ನಿರತ ರೈತರನ್ನುದ್ದೇಶಿಸಿ ಉಪ ವಿಭಾಗಾಧಿಕಾರಿ ಶಿವಸ್ವಾಮಿ ಮಾತನಾಡಿದರು.
ತಾಲ್ಲೂಕಿನ ರೈತರ ಮೂಲಭೂತ ಅವಶ್ಯಕತೆಯಾದ ಕೃಷಿ ಉತ್ಪನ್ನ ಮಾರುಕಟ್ಟೆ ನಿರ್ಮಾಣಕ್ಕೆ ಚಿಕ್ಕದಾಸರಹಳ್ಳಿಯ ಬ್ಯಾಟರಾಯನಗುಡಿ ದೇವಾಲಯದ ಬಳಿ ಅಗತ್ಯ ಸರ್ಕಾರಿ ಸ್ಥಳ ಲಭ್ಯವಿದ್ದು ಜಿಲ್ಲಾಧಿಕಾರಿ ಹಾಗೂ ಎಪಿಎಂಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ಥಳ ಮಂಜೂರು ಮಾಡಲು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.
ತಾಲ್ಲೂಕಿನ ರೈತರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ತಾಲ್ಲೂಕಿನಲ್ಲಿ ಎಪಿಎಂಸಿ ನಿರ್ಮಾಣ ಮಾಡಲು ಸರ್ಕಾರಿ ಜಾಗದ ಲಭ್ಯತೆಯಿರುವ ಬಗ್ಗೆ ತಹಸೀಲ್ದಾರರಿಂದ ಮಾಹಿತಿ ಪಡೆದುಕೊಂಡಿದ್ದೇನೆ. ತಾಲ್ಲೂಕಿನ ಚಿಕ್ಕದಾಸರಹಳ್ಳಿ ಬಳಿ ಸುಮಾರು ೩೦ ಎಕರೆಯಷ್ಟು ಸರ್ಕಾರಿ ಗೋಮಾಳವಿದ್ದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಲ್ಲಿ ಎಪಿಎಂಸಿ ನಿರ್ಮಾಣ ಮಾಡಲು ತ್ವರಿತವಾಗಿ ಸ್ಥಳ ಮಂಜೂರು ಮಾಡಲು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ನಂತರ ರೈತ ಸಂಘದಿಂದ ಹಮ್ಮಿಕೊಂಡಿದ್ದ ಸತ್ಯಾಗ್ರಹವನ್ನು ಕೈಬಿಟ್ಟರು.
ರೈತಸಂಘದ ರಾಜ್ಯಾಧ್ಯಕ್ಷ ಜಿ.ಜಿ.ಹಳ್ಳಿ ನಾರಾಯಣಸ್ವಾಮಿ, ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಎನ್.ವೆಂಕಟಲಕ್ಷ್ಮಯ್ಯ, ಪದಾಧಿಕಾರಿಗಳಾದ ಗಂಗಾಧರ್, ಎಚ್.ಎಸ್.ಸತ್ತಾರ್, ಬಿ.ಎ.ಲೋಕೇಶ್, ಹಾಜರಿದ್ದರು.