ಮುಂದಿನ ಎರಡು ವರ್ಷಗಳ ಅವಧಿಯಲ್ಲಿ ಕ್ಷೇತ್ರದಾದ್ಯಂತ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನ ನಡೆಸಲಾಗುವುದು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಜಂಗಮಕೋಟೆ ಕ್ರಾಸ್ನಲ್ಲಿ ಸೋಮವಾರ ಆಯೋಜಿಸಲಾಗಿದ್ದ ಸುಮಾರು ೪.೫ ಕೋಟಿ ರೂ ವೆಚ್ಚದ ಜಂಗಮಕೋಟೆ- ಶಿಡ್ಲಘಟ್ಟ ರಸ್ತೆ ಅಗಲೀಕರಣ ಹಾಗೂ ಡಾಂಬರೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಕೈಗೊಳ್ಳುವ ವಿವಿಧ ಕಾಮಗಾರಿಗಳ ಗುಣಮಟ್ಟದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗಕೂಡದು. ಗ್ರಾಮಗಳಲ್ಲಿ ಕಾಮಗಾರಿ ನಡೆಯುವಾಗ ಪಕ್ಷಾತೀತವಾಗಿ ಜನರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ಗ್ರಾಮದ ಒಳಿತಿಗೆ ಸಹಕರಿಸಬೇಕು ಎಂದರು.
ತಾವು ಶಾಸಕರಾಗಿ ಮೂರು ವರ್ಷ ಕಳೆದಿದ್ದು ಕ್ಷೇತ್ರದ ಶೇ. ೬೫ ರಷ್ಟು ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮ ರಸ್ತೆ ಸೇರಿದಂತೆ ಕುಡಿಯುವ ನೀರಿಗಾಗಿ ಕೊಳವೆ ಬಾವಿ ಕೊರೆಸಲಾಗಿದೆ. ಇನ್ನುಳಿದ ೩೫ ರಷ್ಟು ಭಾಗದ ಕೆಲಸಗಳನ್ನು ಮುಂದಿನ ಎರಡು ವರ್ಷಗಳಲ್ಲಿ ಮಾಡಲಾಗುವುದು ಎಂದರು.
ಈಗಾಗಲೇ ಬಸ್ ಡಿಪೋ ನಿರ್ಮಾಣ ಮಾಡಲು ಸ್ಥಳ ಗುರುತಿಸಲಾಗಿದೆ. ಇನ್ನು ಅಗ್ನಿಶಾಮಕ ದಳದ ಕಚೇರಿಗೆ ಮುಂದಿನ ಹತ್ತು ದಿನಗಳೊಳಗೆ ಉದ್ಘಾಟನೆ ನೆರವೇರಿಸಲಾಗುವುದು ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಶಿವಾರೆಡ್ಡಿ, ಜಿಲ್ಲಾ ಪಂಚಾಯತಿ ಸದಸ್ಯೆ ತನುಜಾರಘು, ಜಂಗಮಕೋಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಜೀರ್ಸಾಬ್, ತಾಲೂಕು ಪಂಚಾಯತಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣರೆಡ್ಡಿ, ಸದಸ್ಯರಾದ ರಾಜಶೇಖರ್, ಚಂದ್ರಕಲಾ ಬೈರೇಗೌಡ, ಕುಂಭಿಗಾನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಆಂಜಿನಪ್ಪ, ಮುಖಂಡರಾದ ಎಚ್ಕ್ರಾಸ್ ರವಿ, ನಂಜೇಗೌಡ, ಜಂಗಮಕೋಟೆ ಮಂಜುನಾಥ್ ಮತ್ತಿತರರು ಹಾಜರಿದ್ದರು.