ಆರ್.ಟಿ.ಇ ಕಾರ್ಯಪಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಗರದ ಸ್ತ್ರೀಶಕ್ತಿ ಭವನದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ ಮಾತನಾಡಿದರು.
ಚಿಕ್ಕ ವಯಸ್ಸಿನಲ್ಲಿಯೇ ಮಕ್ಕಳಿಗೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ಬಗ್ಗೆ ಅರಿವು ಮೂಡಿಸುವ ಕೆಲಸವನ್ನು ಶಾಲೆಗಳು ಮಾಡಬೇಕು ಎಂದು ಅವರು ಹೇಳಿದರು.
ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಪಂಚಾಯತ್ ರಾಜ್ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಮಕ್ಕಳಿಗೆ ಪರಿಚಯಿಸುವ ಕೆಲಸವಾಗಬೇಕು. ಪಂಚಾಯತ್ ರಾಜ್ ವಿಕೇಂದ್ರೀಕರಣದ ಫಲವಾಗಿ ಉದಯಿಸಿರುವ ಗ್ರಾಮ ಪಂಚಾಯಿತಿ ಪ್ರತಿಯೊಬ್ಬರ ಸಮಸ್ಯೆಗಳನ್ನು ಆಲಿಸುವ ಕೆಲಸ ಮಾಡಬೇಕು. ಇನ್ನು ಈಗಾಗಲೇ ಮಕ್ಕಳು ಹೇಳಿರುವ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸುವ ಜೊತೆಗೆ ಬಗೆಹರಿಸಲು ಪ್ರಾಮಾಣಿಕ ಯತ್ನ ನಡೆಸಲಾಗುವುದು ಎಂದರು.
ಮಕ್ಕಳ ಹಕ್ಕುಗಳ ಸಂಸತ್ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಲೆಯ ಸುಮಾರು ೬೦ ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡು ಜಿಲ್ಲೆಯಾಧ್ಯಂತ ಮಕ್ಕಳಿಗೆ ಇರುವ ಸಮಸ್ಯೆ ಹಾಗು ಬೇಡಿಕೆಗಳ ಬಗ್ಗೆ ಸಭೆಯಲ್ಲಿ ಹಾಜರಿದ್ದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಗಮನಕ್ಕೆ ತಂದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಜೇಂದ್ರಪ್ರಸಾದ್, ಶಿಶು ಅಭಿವೃದ್ದಿ ಅಧಿಕಾರಿ ಲಕ್ಷ್ಮಿದೇವಮ್ಮ, ಸಿಆರ್‌ಟಿ ಜಿಲ್ಲಾ ಸಂಯೋಜಕ ಜೆ.ಸತೀಶ್ ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಮುನಿಯಪ್ಪ, ಮಹಿಳಾ ಸಮಖ್ಯಾ ಸಂಸ್ಥೆಯ ಸುವರ್ಣ, ಎಡಿಡಿ ಸಂಸ್ಥೆಯ ಮುರಳೀಧರ ಸಿಆರ್‌ಟಿ ಸಂಸ್ಥೆಯ ರಾಮಕೃಷ್ಣಪ್ಪ, ಜಯಂತಿ, ಉಮಾ, ಅಶ್ವಿನಿ, ನಳಿನಿ, ಕಾಂತರಾಜು ಹಾಜರಿದ್ದರು.