22.5 C
Sidlaghatta
Thursday, July 31, 2025

ತಾಲ್ಲೂಕು ಆಡಳಿತದ ವತಿಯಿಂದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

- Advertisement -
- Advertisement -

ಬೆಂಗಳೂರು ನಗರವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಲ್ಲಿ ಭದ್ರಬುನಾದಿ ಹಾಕಿದ ನಾಡಪ್ರಭು ಕೆಂಪೇಗೌಡರನ್ನು ಯಾವುದೇ ಒಂದು ಸಮಾದಾಯಕ್ಕೆ ಸೀಮಿತಗೊಳಿಸದೇ ಎಲ್ಲರೂ ಗೌರವಿಸುವಂತಹ ಕೆಲಸವಾಗಬೇಕು ಎಂದು ಶಾಸಕ ವಿ.ಮುನಿಯಪ್ಪ ತಿಳಿಸಿದರು.
ನಗರದ ಕಂದಾಯ ಭವನದ ಮುಂಭಾಗದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಗುರುವಾರ ಆಯೋಜಿಸಲಾಗಿದ್ದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಎಲ್ಲಾ ಸಮುದಾಯಗಳ ಎಲ್ಲಾ ಕಸುಬುಗಳಿಗೆ ಮನ್ನಣೆ ಸಿಕ್ಕಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂಬ ಸತ್ಯವನ್ನಿರಿತು ನಾಡಪ್ರಭು ಕೆಂಪೇಗೌಡರು ಬೆಂಗಳೂರು ನಿರ್ಮಾಣ ಮಾಡಿದ್ದಾರೆ. ವಿವಿಧ ಸಮುದಾಯದವರಿಗೆ ಅವರದೇ ಆದಂತಹ ಪೇಟೆಗಳನ್ನು ನಿರ್ಮಿಸಿ ಆರ್ಥಿಕ ಸಬಲೀಕರಣಕ್ಕೆ ಅವಕಾಶ ಮಾಡಿಕೊಡುವ ಮೂಲಕ ಸಮಾಜದ ಎಲ್ಲಾ ವರ್ಗಗಳ ಪ್ರೀತಿ ಗಳಿಸಿದ್ದ ನಾಡಪ್ರಭು ಕೆಂಪೇಗೌಡರು ಮುಂದಿನ ಪೀಳಿಗೆಗಾಗಿ ಸಾವಿರಾರು ಕೆರೆ, ಕುಂಟೆ, ಕಲ್ಯಾಣಿಗಳನ್ನು ನಿರ್ಮಿಸುವ ಮೂಲಕ ನಾಡಿಗೆ ಮಾದರಿಯಾಗಿದ್ದಾರೆ ಎಂದರು.
ಸರ್ಕಾರ ಒಳ್ಳೆಯ ಸದುದ್ದೇಶ ಇಟ್ಟುಕೊಂಡು ಮಹಾತ್ಮರ ಜಯಂತಿಗಳನ್ನು ಆಚರಿಸುತ್ತಿದೆಯಾದರೂ ಜಯಂತಿಗಳಲ್ಲಿ ಆಯಾ ಸಮುದಾಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸದೇ ಇರುವುದು ನಿಜಕ್ಕೂ ದುರಾದೃಷ್ಟಕರ. ಆಯಾ ಸಮಾಜದಲ್ಲಿ ಏನೇನು ಕೊರತೆಯಿದೆ, ಸಮಾಜದ ಏಳಿಗೆಗಾಗಿ ಏನು ಮಾಡಬೇಕು ಎನ್ನುವುದನ್ನು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಗಮನಕ್ಕೆ ತರುವ ಪ್ರಯತ್ನಗಳಾಗಬೇಕು. ನಿರೀಕ್ಷಿತ ಮಟ್ಟದಲ್ಲಿ ಸಮುದಾಯದ ಬೆಳವಣಿಗೆಯಾಗಬೇಕಾದರೆ ಎಲ್ಲರೂ ಸಂಘಟಿತರಾಗಬೇಕು ಎಂದರು.
ತಹಶೀಲ್ದಾರ್ ಎಸ್.ಅಜಿತ್‌ಕುಮಾರ್ ರೈ ಮಾತನಾಡಿ, ಕೆರೆ, ಕುಂಟೆ, ಕಲ್ಯಾಣಿಗಳಿಂದ ಎಲ್ಲಾ ವರ್ಗದ ಜನರು ಸಾಮರಸ್ಯವಾಗಿ ಜೀವಿಸುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಅಡಿಪಾಯ ಹಾಕಿಕೊಟ್ಟಂತಹ ನಾಡಪ್ರಭು ಕೆಂಪೇಗೌಡರನ್ನು ಎಲ್ಲರೂ ಸ್ಮರಿಸುವ ಕೆಲಸ ಆಗಬೇಕು ಎಂದರು.
ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ಗುರುವಾರ ಬೆಳಗ್ಗೆ ತಾಲ್ಲೂಕಿನ ಬೋದಗೂರು ಗ್ರಾಮದ ಬಳಿ ಶಾಸಕ ವಿ.ಮುನಿಯಪ್ಪ ಹಾಗೂ ಗಣ್ಯರು ಸಸಿಗಳನ್ನು ನೆಟ್ಟರು.
ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಪಡೆದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಇಓ ಬಿ.ಶಿವಕುಮಾರ್, ನೂತನ ತಹಶೀಲ್ದಾರ್ ಎಂ.ದಯಾನಂದ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಪೌರಾಯುಕ್ತ ಜಿ.ಎನ್.ಚಲಪತಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್, ಸರ್ಕಲ್ ಇನ್ಸ್ ಪೆಕ್ಟರ್ ಆನಂದ್‌ಕುಮಾರ್, ಕೋಚಿಮುಲ್ ನಿರ್ದೇಶಕ ಶ್ರೀನಿವಾಸ್, ಭಕ್ತರಹಳ್ಳಿ ಬೈರೇಗೌಡ, ಜೆ.ವಿ.ವೆಂಕಟಸ್ವಾಮಿ, ಕೆಂಪಣ್ಣ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!