ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ 115 ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ತಂತ್ರಜ್ಞಾನ ವೇಗವಾಗಿ ಅಭಿವೃದ್ಧಿಯಾಗುತ್ತಿದೆ. ವಿದ್ಯಾರ್ಥಿಗಳು ತಾಂತ್ರಿಕ ಕೌಶಲ್ಯವನ್ನು ತಮ್ಮದಾಗಿಸಿಕೊಂಡು ಜ್ಞಾನಕ್ರಾಂತಿಯಲ್ಲಿ ಹಿಂದುಳಿಯಬಾರದು ಎಂಬ ಉದ್ದೇಶದಿಂದ ಸರ್ಕಾರ ಉಚಿತವಾಗಿ ಲ್ಯಾಪ್ ಟಾಪ್ ನೀಡುತ್ತಿದೆ. ಇದನ್ನು ಸದುಪಯೋಗಪಡಿಸಿಕೊಂಡು ವಿದ್ಯಾರ್ಜನೆ ಮಾಡಿ ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳಬೇಕು. ಪದವಿ ವಿದ್ಯಾರ್ಥಿಗಳ ಜ್ಞಾನಾಭಿವೃದ್ಧಿಯನ್ನು ಹೆಚ್ಚಿಸುವ ಹಾಗೂ ಅವರನ್ನು ತಾಂತ್ರಿಕವಾಗಿ ನೈಪುಣ್ಯರನ್ನಾಗಿ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಈ ಯೋಜನೆಯ ಲಾಭ ಪಡೆದು ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಬೇಕೆಂದು ಹೇಳಿದರು.
ಪ್ರಾಂಶುಪಾಲ ಡಾ.ಚಂದ್ರಾನಾಯಕ್, ಉಪನ್ಯಾಸಕರಾದ ಡಾ.ವೆಂಕಟೇಶ್, ಡಾ.ನರಸಿಂಹಮೂರ್ತಿ, ಡಾ.ಮುರಳಿ, ಡಾ.ಉಮೇಶ್ ರೆಡ್ಡಿ, ಡಾ.ವೆಂಕಟರೋಣಪ್ಪ, ಡಾ.ಮಹೇಶ್, ರಮೇಶ್, ಸಂತೋಷ್ ಕುಮಾರ್ ಹಾಜರಿದ್ದರು.