ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ) ಹಾಗೂ ಕಾರ್ಯದರ್ಶಿಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಶಾಸಕ ವಿ.ಮುನಿಯಪ್ಪ ಮಾತನಾಡಿದರು.
ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡುವುದು ಮತ್ತು ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಿ ಕುಡಿಯುವ ನೀರಿನ ಪೂರೈಕೆಗಾಗಿ ಅಗತ್ಯ ಕ್ರಮಗಳನ್ನು ಜರುಗಿಸಲು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದು ಅವರು ತಿಳಿಸಿದರು.
ತಾಲ್ಲೂಕಿನಾದ್ಯಂತ ಇರುವ ಗ್ರಾಮ ಪಂಚಾಯಿತಿಗಳಲ್ಲಿ ನಿವೇಶನ ರಹಿತರ ಪಟ್ಟಿ ತಯಾರಿಸಿ ಅಂತಹವರಿಗೆ ನಿವೇಶನ ಮಂಜೂರು ಮಾಡಬೇಕು. ಈಗಾಗಲೇ ತಾಲ್ಲೂಕಿನಾದ್ಯಂತ ಕೆಲವು ಗ್ರಾಮಗಳಿಗೆ ಕುಡಿಯುವ ನೀರನ್ನು ಖಾಸಗಿ ಕೊಳವೆ ಬಾವಿ ಹಾಗೂ ಟ್ಯಾಂಕರ್ ಮೂಲಕ ಪೂರೈಸಲಾಗುತ್ತಿದೆಯಾದರೂ ಆದಷ್ಟು ಬೇಗ ಅಂತಹ ಗ್ರಾಮಗಳಲ್ಲಿ ಸ್ಥಳ ಗುರುತಿಸಿ ಕೊಳವೆ ಬಾವಿ ಕೊರೆಸಲು ಕ್ರಮ ಜರುಗಿಸಬೇಕು ಎಂದರು.
ಇನ್ನು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ರೈತರು ಹಾಗೂ ನಾಗರಿಕರಿಗೆ ಕೆಲಸ ನೀಡುವ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಶ್ರಮಿಸಬೇಕು ಎಂದರು.
ತಾಲ್ಲೂಕಿನಾದ್ಯಂತ ಇರುವ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಘನ ಹಾಗು ದ್ರವ ತ್ಯಾಜ್ಯ ಘಟಕಗಳನ್ನು ಪ್ರಾರಂಭಿಸಲು ಬೇಕಾದ ಎಲ್ಲಾ ಅಗತ್ಯ ಕ್ರಮಗಳನ್ನು ಕೂಡಲೇ ಪೂರ್ಣಗೊಳಿಸುವುದು ಹಾಗೂ ವಸತಿ ಯೋಜನೆಯಡಿ ಫಲಾನುಭವಿಗಳನ್ನು ಆಯ್ಕೆ ಮಾಡಲು ಸಕಾಲದಲ್ಲಿ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆ ನಡೆಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಪಿಡಿಓ ಗಳಿಂದ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸಮಸ್ಯೆಗಳ ಮಾಹಿತಿ ಪಡೆದುಕೊಂಡರು.
ತಾಲ್ಲೂಕು ಪಂಚಾಯಿತಿ ಇಓ ಎಂ.ವೆಂಕಟೇಶ್, ನರೇಗಾ ಸಹಾಯಕ ನಿದೇಶಕ ಶ್ರೀನಾಥಗೌಡ, ಸರ್ಕಲ್ ಇನ್ಸ್‌ಪೆಕ್ಟರ್ ಸಿದ್ದರಾಜು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಜರಿದ್ದರು.