ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬುಧವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಗೂ ಬಹುಜನ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ನಡೆಸಿದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಬಹುಜನ ವಿದ್ಯಾರ್ಥಿ ಸಂಘದ ಅಧ್ಯಕ್ಷ ನರೇಂದ್ರಬಾಬು ಮಾತನಾಡಿದರು.
ಜಿಲ್ಲೆಯಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರಿಗೆ ರಕ್ತದ ಅವಶ್ಯಕತೆ ಹೆಚ್ಚಿದೆ. ಅದಕ್ಕಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿರುವುದಾಗಿ ಅವರು ತಿಳಿಸಿದರು.
ಹೆಣ್ಣು ಮಕ್ಕಳಲ್ಲಿ ಬಹುತೇಕರು ರಕ್ತದಲ್ಲಿನ ಹೀಮೋಗ್ಲೋಬಿನ್ ಕೊರತೆಯಿಂದ ನರಳುತ್ತಾರೆ. ಗರ್ಭಿಣಿಯರು ಮತ್ತು ಬಾಣಂತಿಯರಿದ್ದಾಗ ತುರ್ತಾಗಿ ರಕ್ತವನ್ನು ನೀಡಬೇಕಾಗುತ್ತದೆ. ಅದಕ್ಕಾಗಿ ಶಿಬಿರವನ್ನು ಆಯೋಜಿಸಿದ್ದೇವೆ. ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯೂ ನಿಯಮಿತವಾಗಿ ರಕ್ತದಾನ ಮಾಡಿ ಸಮಾಜಕ್ಕೆ ಋಣ ತೀರಿಸುವ ಕೆಲಸ ಮಾಡಬೇಕು ಎಂದರು.
ಐಟಿಐ ಕಾಲೇಜಿನ ವಿದ್ಯಾರ್ಥಿಗಳು, ಬಹುಜನ ವಿದ್ಯಾರ್ಥಿ ಸಂಘದ ಸದಸ್ಯರು, ಸಾರ್ವಜನಿಕರು ಸೇರಿದಂತೆ ಒಟ್ಟು 51 ಮಂದಿ ರಕ್ತದಾನ ಮಾಡಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಎನ್.ಕೆ.ಗುರುರಾಜರಾವ್, ಡಾ.ಕುಮುದಿನಿ, ಡಾ.ರವಿ ಲಂಬಾಣಿ, ಬಹುಜನ ವಿದ್ಯಾರ್ಥಿ ಸಂಘದ ರಾಮ್‌ದಾಸ್, ಗಂಗಾಧರ್ ಹಾಜರಿದ್ದರು.