ನಗರಸಭೆ ವ್ಯಾಪ್ತಿಯಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳು ಉತ್ತಮವಾಗಿರಬೇಕಾದರೆ ಅದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ನಗರದ ಕಾರ್ಮಿಕ ನಗರದ ನಾಲೆ ಪ್ರದೇಶದಲ್ಲಿ ನಗರೋತ್ಥಾನ- ೨ ಯೋಜನೆಯಡಿ ಸುಮಾರು ೭೫ ಲಕ್ಷ ರೂ ವೆಚ್ಚದ ರಸ್ತೆ ಡಾಂಬರೀಕರಣ ಹಾಗು ಚರಂಡಿ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.
ನಗರೋತ್ಥಾನ-೨ ಯೋಜನೆಯ ಸುಮಾರು ೧ ಕೋಟಿ ೭೫ ಲಕ್ಷ ರೂ ಉಳಿಕೆ ಹಣವನ್ನು ಸರ್ಕಾರದಿಂದ ಮಂಜೂರು ಮಾಡಿಸಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಲಾಗುತ್ತಿದೆ. ಇದೇ ಅನುದಾನದಲ್ಲಿ ಸುಮಾರು ೭೫ ಲಕ್ಷ ರೂ ವೆಚ್ಚದಲ್ಲಿ ರಸ್ತೆ ಡಾಂಬರೀಕರಣ ಹಾಗು ಚರಂಡಿ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಂಡಿದ್ದು ಚರಂಡಿ ಕಾಮಗಾರಿ ಬಹುತೇಕ ಮುಗಿದಿದೆ. ಇದೀಗ ರಸ್ತೆಗೆ ಡಾಂಬರೀಕರಣ ಹಾಕುವ ಕೆಲಸಕ್ಕೆ ಚಾಲನೆ ನೀಡಲಾಗಿದೆ.
ಕಾರ್ಮಿಕನಗರದ ನಾಳೆ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತ ಬಂಧುಗಳ ಬಹುದಿನಗಳ ಬೇಡಿಕೆಯಾಗಿದ್ದ ಸುಸಜ್ಜಿತ ಚರಂಡಿ ಹಾಗು ರಸ್ತೆ ಕಾಮಗಾರಿಗೆ ಈ ಭಾಗದ ನಾಗರಿಕರು ಪಕ್ಷಾತೀತವಾಗಿ ಸಹಕರಿಸಬೇಕು ಎಂದರು.
ಸಾರ್ವಜನಿಕರ ಸಹಭಾಗಿತ್ವ ಸಂಪೂರ್ಣವಾಗಿ ಇದ್ದಾಗ ಮಾತ್ರವೇ ಸರ್ಕಾರದ ಯಾವುದೆ ಯೋಜನೆ ಯಶಸ್ಸಾಗಲು ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಇಲ್ಲದೆ ಯಾವುದೆ ಯೋಜನೆಯಾಗಲಿ ಯಶಸ್ಸು ಸಾಧ್ಯವಿಲ್ಲ. ಕಾಮಗಾರಿ ನಡೆಯುವಾಗ ಪಕ್ಷಾತೀತವಾಗಿ ಜನರು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಅಫ್ಸರ್ಪಾಷ, ಸಿಕಂದರ್, ಮುಖಂಡರಾದ ಲಕ್ಷ್ಮಿನಾರಾಯಣ, ಸುರೇಶ್, ರೆಹಮಾನ್, ಮುನಿರೆಡ್ಡಿ, ಮಕ್ತಿಯಾರ್, ಗುತ್ತಿಗೆದಾರ ಕೆ.ಬಿ.ಮಂಜುನಾಥ್ ಹಾಜರಿದ್ದರು.