26.4 C
Sidlaghatta
Thursday, July 31, 2025

“ರಾಜ ಋಷಿ” ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನಾಚರಣೆ

- Advertisement -
- Advertisement -

ತಾಲ್ಲೂಕಿನ ಸುಗುಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಕಸಾಪ ವತಿಯಿಂದ ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಾತ್ಮಾ ಗಾಂಧೀಜಿಯವರಿಂದ “ರಾಜ ಋಷಿ” ಎಂದು ಕರೆಸಿಕೊಂಡು, ಜನಸಾಮಾನ್ಯರಿಂದ “ಕೃಷ್ಣರಾಜ ಭೂಪ, ಮನೆ ಮನೆ ದೀಪ” ಎಂಬ ಹಾಡಿನ ಮೂಲಕ ಜನಪ್ರಿಯರಾದವರು ಮೈಸೂರು ಯದುವಂಶದ 24ನೇ ಅರಸ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ತಿಳಿಸಿದರು.
ಸಾಹಿತ್ಯ, ಸಂಗೀತ, ವಾಸ್ತು ಶಿಲ್ಪಗಳ ಅಭಿವೃದ್ಧಿಗೆ ಪ್ರಾಮುಖ್ಯತೆಯನ್ನು ಕೊಟ್ಟು 1915 ರಲ್ಲಿ ಬೆಂಗಳೂರಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನು ಮಹಾರಾಜರು ಪ್ರಾರಂಭಿಸಿದರು. ಹೊಸ ರೈಲು ದಾರಿಗಳ ನಿರ್ಮಾಣ, ೧೯೦೭ರಲ್ಲಿ “ವಾಣೀವಿಲಾಸ ಸಾಗರ” ಕಟ್ಟಲ್ಪಟ್ಟಿತು. ೧೯೧೧ ರಲ್ಲಿ ಆರಂಭವಾದ “ಕೃಷ್ಣರಾಜ ಸಾಗರ” ಭಾರತದ ಮೊಟ್ಟ ಮೊದಲ ಬೃಹತ್ ಜಲಾಶಯ. ೧೯೦೦ರಲ್ಲಿಯೇ ಶಿವನ ಸಮುದ್ರದ ಬಳಿ ಕಾವೇರಿ ನದಿ ಯಿಂದ ಜಲ ವಿದ್ಯುತ್ ಕೇಂದ್ರ ಆರಂಭವಾಯಿತು. ಇದು ಭಾರತದ ಮೊದಲ ಜಲ ವಿದ್ಯುತ್ ಕೇಂದ್ರ. ಏಷ್ಯಾ ಖಂಡದಲ್ಲೇ ಮೊದಲ ಜಲ ವಿದ್ಯುತ್ ಯೋಜನೆಯನ್ನು ಪ್ರಾರಂಭಿಸಿದ ಕೀರ್ತಿ ನಾಲ್ವಡಿಯವರದು. ಇದರ ಫಲಿತಾಂಶವಾಗಿ ೧೯೦೫ ಆಗಸ್ಟ್ ೩ ರಂದು ಪ್ರಥಮವಾಗಿ ಬೆಂಗಳೂರಿನಲ್ಲಿ ದೀಪಗಳು ಬೆಳಗಿದವು.
ಭದ್ರಾವತಿಯ ಮೈಸೂರು ಕಬ್ಬಿಣದ ಕಾರ್ಖಾನೆ, ಬೆಂಗಳೂರಿನ ಸಾಬೂನು ಕಾರ್ಖಾನೆ, ಮೈಸೂರಿನ ಗಂಧದೆಣ್ಣೆ ಕಾರ್ಖಾನೆ ಸೇರಿದಂತೆ ಹಲವು ಕೈಗಾರಿಕ ಅಭಿವೃದ್ದಿಗಳು ಇವರಿಂದ ನಡೆದವು ಎಂದು ವಿವರಿಸಿದರು.
ಶಿಕ್ಷಕ ರುದ್ರೇಶಮೂರ್ತಿ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ಸಂಸ್ಥಾನದ ಸರ್ವತೋಮುಖ ಅಭಿವೃದ್ಧಿಗೆ ಹೊಸ ದಿಕ್ಕನ್ನು ತೋರಿದ ಮಹನೀಯರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ಎಲ್ಲಾ ಸಮುದಾಯದ ಜನರಿಗೆ ಸರ್ಕಾರಿ ಉದ್ಯೋಗದಲ್ಲಿ ಪ್ರತಿನಿಧ್ಯ ದೊರಕುವಂತೆ ಮಾಡಿದ್ದರು. ೧೯೨೧ರಲ್ಲಿ ಪ್ರಥಮ ಭಾರಿಗೆ ಎಲ್ಲಾ ಹಿಂದುಳಿದ ಸಮುದಾಯಗಳಿಗೆ ಶೇ ೭೫ರಷ್ಟು ಮೀಸಲಾತಿ ನೀಡಲು ಆದೇಶ ಹೊರಡಿಸಿದರು. ಹಾಗಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರನ್ನು “ಮೀಸಲಾತಿಯ ಜನಕ” ಎನ್ನುತ್ತಾರೆ. ಸ್ಥಳೀಯ ಸಂಸ್ಥೆಗಳನ್ನು ರಚಿಸಿ, ಆಡಳಿತ ವಿಕೇಂದ್ರೀಕರಣಕ್ಕೆ ಅನುವು ಮಾಡಿ ಕೊಟ್ಟರು. ರಾಜ್ಯದ ಸಣ್ಣ ಸಣ್ಣ ಪಟ್ಟಣಗಳಲ್ಲಿಯೂ ಸಹ ಮುನಿಸಿಪಾಲಿಟಿಗಳು ರಚನೆಯಾದವು. ಹಳ್ಳಿಗಳಲ್ಲಿ ಪ್ರಥಮ ಬಾರಿಗೆ ಗ್ರಾಮ ಪಂಚಾಯಿತಿಗಳು ಕಾರ್ಯ ನಿರ್ವಹಿಸಲು ಆರಂಭ ಮಾಡಿದುದರಿಂದ, ಗ್ರಾಮೀಣ ಪ್ರದೇಶಗಳಲ್ಲಿ ಆಡಳಿತದಲ್ಲಿ ಜನರ ಭಾಗವಹಿಸುವಿಕೆಗೆ ಅಪಾರ ಉತ್ತೇಜನ ನೀಡಲಾಯಿತು ಎಂದರು.
ಶಿಕ್ಷಕ ಎ.ಬಿ.ನಾಗರಾಜ್ ಮಾತನಾಡಿ, ಹಲವು ಸಾಮಾಜಿಕ ಕಾನೂನುಗಳು ಜಾರಿಗೊಳಿಸಿದ ಕೀರ್ತಿ ನಾಲ್ವಡಿಯವರದ್ದು. ದೇವದಾಸಿ ಪದ್ಧತಿ ನಿಷೇಧ, ಬಸವಿ ಪದ್ಧತಿ ರದ್ಧತಿ, “ಗೆಜ್ಜೆಪೂಜೆ” ಪದ್ಧತಿ ಸಂಪೂರ್ಣ ನಿರ್ಮೂಲನೆ, ವೇಶ್ಯಾವೃತ್ತಿ ತಡೆಗಟ್ಟುವ ಕಾಯ್ದೆ, ವಿಧವೆಯರಿಗೆ ಮರುವಿವಾಹ ಮಾಡಿಕೊಳ್ಳುವ ಕಾಯ್ದೆ, ಸ್ತ್ರೀಯರಿಗೆ ಕಡ್ಡಾಯ ಶಿಕ್ಷಣ ಜಾರಿ, ಶಾಲಾ ಪ್ರವೇಶಕ್ಕೆ ಜಾತಿ ಪರಿಗಣನೆಯ ನಿಷೇಧ, ಮಾಧ್ಯಮಿಕ ಶಾಲಾ ಮಟ್ಟದಲ್ಲಿ ಶಿಕ್ಷಣ ಶುಲ್ಕ ರದ್ಧತಿ, ೧೯೨೭ ರಲ್ಲಿ ಸ್ತ್ರೀಯರಿಗೆ ಮತದಾನದ ಹಕ್ಕನ್ನು ಮೊಟ್ಟಮೊದಲ ಬಾರಿಗೆ ಕಲ್ಪಿಸಿಕೊಟ್ಟರು, ೧೯೦೫ ರಲ್ಲಿ ಸಹಕಾರಿ ಕಾರ್ಮಿಕ ಪರಿಹಾರ ಕಾಯ್ದೆಯನ್ನು ಜಾರಿಗೆ ತಂದರು ಎಂದು ಹೇಳಿದರು.
ಕಸಾಪ ವತಿಯಿಂದ ಶಿಕ್ಷಕ ರುದ್ರೇಶಮೂರ್ತಿ ಅವರನ್ನು ಸನ್ಮಾನಿಸಲಾಯಿತು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಂ.ಶಂಕರಪ್ಪ, ಉಪಾಧ್ಯಕ್ಷ ಜಗದೀಶ್, ಸದಸ್ಯೆ ಕೆ.ವಿನುತಾ, ತಾಲ್ಲೂಕು ಪ್ರೌಢಶಾಲೆ ಶಿಕ್ಷಕರ ಸಂಘದ ಅಧ್ಯಕ್ಷ ಬೈರಾರೆಡ್ಡಿ, ಶಿಕ್ಷಕರಾದ ಎಂ.ಉಮಾದೇವಿ, ನಾಗರಾಜ್, ಎಚ್.ತಾಜೂನ್, ಎಂ.ವೈ ಲಕ್ಷ್ಮಯ್ಯ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!