ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯನ್ನರಿತು ಬದುಕಿನೊಡನೆ ನೇರ ಸಂಪರ್ಕವಿಟ್ಟುಕೊಳ್ಳಬೇಕು. ಈ ಉದ್ದೇಶದಿಂದಲೇ ಹಳ್ಳಿಗಳಿಗೆ ವಿದ್ಯಾರ್ಥಿಗಳನ್ನು ಕರೆತಂದು ಎನ್.ಎಸ್.ಎಸ್ ಶಿಬಿರ ಆಯೋಜಿಸಲಾಗುತ್ತಿದೆ ಎಂದು ವೆಂಕಟೇಶ್ವರ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಸುರೇಶ್ ತಿಳಿಸಿದರು.
ತಾಲ್ಲೂಕಿನ ಹಂಡಿಗನಾಳ ಗ್ರಾಮ ಪಂಚಾಯಿತಿ ಆವರಣದಲ್ಲಿ ಸೋಮವಾರ ವೆಂಕಟೇಶ್ವರ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ಆರು ದಿನಗಳ ಎನ್.ಎಸ್.ಎಸ್ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸೇವೆಯ ಮೂಲಕ ಸಮಾಜದ ಅರಿವು ಮೂಡಿಸುವುದು ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ. ಇದರಿಂದ ಸ್ವಯಂಸೇವಕರ ವ್ಯಕ್ತಿತ್ವ ವಿಕಸನವಾಗುತ್ತದೆ. ಸಮಾಜಸೇವೆಯ ಪ್ರಜ್ಞೆ ಜಾಗೃತಗೊಳ್ಳುತ್ತದೆ ಎಂದರು.
ಗ್ರಾಮ ಪಂಚಾಯಿತಿ ಸದಸ್ಯ ಬಿ.ಎಂ.ಜಯರಾಮ್ ಮಾತನಾಡಿ, ಹಳ್ಳಿಗಳ ಉದ್ಧಾರದ ನೆಲೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ನಗರದಲ್ಲಿ ಬೆಳೆದ ವಿದ್ಯಾರ್ಥಿಗಳು ಗ್ರಾಮದ ಜನಜೀವನದ ಪರಿಚಯ ಮಾಡಿಕೊಂಡು ಒಳ್ಳೆಯ ಅಂಶಗಳನ್ನು ಅಳವಡಿಸಿಕೊಳ್ಳಬೇಕು. ಸಾಮರಸ್ಯ, ಸಹಜೀವನ, ಸಹಬಾಳ್ವೆಯ, ಸಹಾಯದ ಮಹತ್ವವನ್ನು ಅರಿಯಬೇಕು. ಊರಿನ ಕೊಳೆಯನ್ನು ತೊಳೆಯುವುದಕ್ಕಿಂತ ಮಿಗಿಲಾಗಿ ಮನುಷ್ಯನ ಮನಸ್ಸಿನಲ್ಲಿರುವ ಕೊಳೆಯನ್ನು ನಾಶ ಮಾಡುವುದು ಪ್ರಮುಖವಾದುದು ಎಂದು ನುಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟು ಸ್ವಚ್ಛತೆ ಕಾರ್ಯವನ್ನು ನಡೆಸಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಮುನಿಯಪ್ಪ, ಸದಸ್ಯರಾದ ಎ.ಎಂ.ತ್ಯಾಗರಾಜ್, ಬೈರಾರೆಡ್ಡಿ, ಪಿಡಿಒ ಅಂಜನ್ ಕುಮಾರ್, ಕಾರ್ಯದರ್ಶಿ ಶ್ರೀನಿವಾಸ್, ಕರವಸೂಲಿಗಾರ ಶ್ರೀನಿವಾಸ್, ರಾಜಣ್ಣ, ನರಸಿಂಹಮೂರ್ತಿ, ಕೃಷ್ಣಪ್ಪ, ವೆಂಕಟೇಶ್ವರ ಎಂಜಿನಿಯರಿಂಗ್ ಕಾಲೇಜಿನ ಜೋಷಿ, ಲೋಕೇಶ್ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







