Home News ಶ್ರೀ ವೇಣುಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ

ಶ್ರೀ ವೇಣುಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ

0

“ಊರದೇವರು” ಎಂದೇ ಪ್ರಸಿದ್ಧವಾದ ಶ್ರೀ ವೇಣುಗೋಪಾಲಸ್ವಾಮಿ ವೇಣುಗೋಪಾಲಸ್ವಾಮಿಯ ಬ್ರಹ್ಮರಥೋತ್ಸವ ಕಾರ್ಯಕ್ರಮ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ದೇವಾಲಯದಲ್ಲಿ ಬ್ರಹ್ಮರಥೋತ್ಸವ ಸಹಿತ ಎಲ್ಲ ಕೈಂಕರ್ಯಗಳು ಪಾಂಚರಾತ್ರಾಗಮ ಪದ್ಧತಿಯಲ್ಲಿ ಕೈಗೊಳ್ಳಲಾಯಿತು. ದೇಗುಲದಲ್ಲಿ ಬೆಳಿಗ್ಗೆಯಿಂದಲೇ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ತಹಶೀಲ್ದಾರ್ ಎಸ್.ಅಜಿತ್‌ಕುಮಾರ್ ರೈ ರಥೋತ್ಸವಕ್ಕೆ ಚಾಲನೆ ನೀಡಿದರು. ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ತಮಟೆ ವಾದನ, ಮಂಗಳ ವಾದ್ಯಗಳ ಮಧ್ಯೆ ರಥವನ್ನು ಅಶೋಕ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು. ಮಹಿಳೆಯರು ತೆಂಗಿನಕಾಯಿ ಒಡೆದು, ಪೂಜೆ ಸಲ್ಲಿಸಿ, ಆರತಿ ಮಾಡಿದರು. ಮಯೂರ ವೃತ್ತದಲ್ಲಿ ಪಾನಕ ಮತ್ತು ಹೆಸರುಬೇಳೆ ಕೋಸಂಬರಿ ಹಂಚಲಾಯಿತು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಈ ಹಿಂದೆ ನಗರದ ಅಶೋಕ ರಸ್ತೆಯು ಕಿರಿದಾಗಿತ್ತು. ಆ ಕಾರಣಕ್ಕೆ ದೊಡ್ಡದಾದ ಬ್ರಹ್ಮ ರಥವನ್ನು ರಸ್ತೆ ಕೊನೆಯಲ್ಲಿ ತಿರುಗಿಸಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ದೇವರನ್ನೇ ತಿರುಗಿಸಿ ರಥವನ್ನು ಹಿಂಬದಿಯಿಂದ ಎಳೆದು ತರಲಾಗುತ್ತಿತ್ತು. ಹೀಗಾಗಿ “ಶಿಡ್ಲಘಟ್ಟ ದೇವರು ಹಿಂದುಮುಂದು” ಎಂಬ ಮಾತು ಚಾಲ್ತಿಗೆ ಬಂದಿತು ಎಂದು ಭಕ್ತರೊಬ್ಬರು ನೆನಪಿಸಿಕೊಂಡರು.
ಈ ಸಂದರ್ಭದಲ್ಲಿ ದೇವಸ್ಥಾನದ ಆವರಣದಲ್ಲಿ ಶಿರಡಿ ಸಾಯಿಬಾಬಾರವರ ಸ್ಥಿರಬಿಂಬ ಪ್ರತಿಷ್ಠಾಪನಾ ಮಹೋತ್ಸವವನ್ನೂ ನಡೆಸಲಾಯಿತು. ಸಾಯಿಬಾಬಾ ಸ್ಥಿರಬಿಂಬವನ್ನು ವಿವಿಧ ಪೂಜಾ ಕಾರ್ಯಗಳೊಂದಿಗೆ ಶ್ರದ್ಧಾಭಕ್ತಿಯಿಂದ ಪ್ರತಿಷ್ಠಾಪನೆ ಮಾಡಲಾಯಿತು.
ವೇಣುಗೋಪಾಲಸ್ವಾಮಿ ದೇಗುಲದಲ್ಲಿ ಮಂಗಳವಾರದಿಂದ ಆರಂಭವಾದ ಪೂಜಾ ಕಾರ್ಯಕ್ರಮಗಳು ಒಂದು ವಾರದ ಕಾಲ ನಡೆಯಲಿದ್ದು, ನಗರದ ಎಲ್ಲ ಸಮುದಾಯಗಳ ಜನಾಂಗದವರು ವಿವಿಧ ಕೈಂಕರ್ಯಗಳಲ್ಲಿ ಭಾಗಿಯಾಗುವುದು ವಿಶೇಷವಾಗಿದೆ.
ನಗರಸಭೆ ಆಯುಕ್ತ ಜಿ.ಎನ್.ಚಲಪತಿ, ಅರ್ಚಕ ವೈ.ಎನ್.ದಾಶರಥಿ ಭಟ್ಟಾಚಾರ್ಯ, ಶ್ರೀ ವೇಣುಗೋಪಾಲಸ್ವಾಮಿ ಸೇವಾ ಮತ್ತು ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷ ಬಿ.ಪಿ.ರಾಘವೇಂದ್ರ, ಬಾಲಕೃಷ್ಣ, ಬಂಗಾರು ಶ್ರೀನಿವಾಸ್ ಹಾಜರಿದ್ದರು.

error: Content is protected !!