ತಾಲ್ಲೂಕಿನಾದ್ಯಂತ ಇರುವ ಅಲೆಮಾರಿ ಹಾಗು ಅರೆ ಅಲೆಮಾರಿ ಜನಾಂಗದವರಿಗೆ ಸರ್ಕಾರದಿಂದ ಸಿಗಬೇಕಾದ ಮೂಲಭೂತ ಸವಲತ್ತುಗಳನ್ನು ಒದಗಿಸಲು ಮೊದಲ ಆಧ್ಯತೆ ನೀಡುವಂತೆ ಅಧಿಕಾರಿಗಳಿಗೆ ತಹಸೀಲ್ದಾರ್ ಕೆ.ಎಂ.ಮನೋರಮಾ ಹೇಳಿದರು.
ನಗರದ ತಾಲ್ಲೂಕು ಕಛೇರಿಯ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಅಲೆಮಾರಿ ಜನಾಂಗದವರು ಸರ್ಕಾರದಿಂದ ಸಿಗುವ ಮೂಲಭೂತ ಸವಲತ್ತುಗಳನ್ನು ಬಳಸಿಕೊಂಡು ಸಾಮಾಜಿಕ, ಆರ್ಥಿಕ ಹಾಗು ಶೈಕ್ಷಣಿಕವಾಗಿ ಮುಂದುವರೆಯಬೇಕು ಎಂದರು.
ಅಲೆಮಾರಿಗಳಿಗೆ ವಸತಿ ಸೌಲಭ್ಯ ಒದಗಿಸಲು ಆಯಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ತಾಲ್ಲೂಕಿನಾಧ್ಯಂತ ಇರುವ ಅಲೆಮಾರಿ ಹಾಗೂ ಅರೆ ಅಲೆಮಾರಿಗಳನ್ನು ಗುರುತಿಸಿ ಅವರಿಗೆ ಸೂಕ್ತ ನಿವೇಶನ ಮತ್ತು ವಸತಿ ಸವಲತ್ತು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಕಂದಾಯ ಇಲಾಖೆಯಿಂದ ಭೂಮಿ ಮಂಜೂರು ಮಾಡುತ್ತೇವೆ ಆದರೆ ಅದನ್ನು ನಿವೇಶನಗಳನ್ನಾಗಿಸಿ ಅಲೆಮಾರಿಗಳಿಗೆ ವಸತಿ ಸವಲತ್ತು ಮಾಡಿಸುವ ಕೆಲಸವನ್ನು ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಾಡಬೇಕೆಂದರು.
ಅಲೆಮಾರಿ ಜನಾಂಗದ ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ವಸತಿನಿಲಯಗಳಲ್ಲಿ ಉಚಿತ ಪ್ರವೇಶ ನೀಡಬೇಕು ಎಂಬ ಜನಾಂಗದ ಮುಖಂಡರ ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ಉತ್ತರಿಸುತ್ತಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಅಲೆಮಾರಿ ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿದ್ದು, ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಮೊರಾರ್ಜಿ ದೇಸಾಯಿ ವಸತಿನಿಲಯಗಳಲ್ಲಿ ಪ್ರವೇಶ ಬೇಕಾದಲ್ಲಿ ಪ್ರತಿಯೊಂದು ಮಗುವೂ ಲಿಖಿತ ಪರೀಕ್ಷೆ ಬರೆಯಲೇ ಬೇಕು. ಪ್ರವೇಶ ಮೆರಿಟ್ ಮೇಲೆ ನಿರ್ಧಾರವಾಗುತ್ತದೆ ಎಂದರು.
ಇನ್ನುಳಿದಂತೆ ಕೃಷಿ ಹಾಗು ರೇಷ್ಮೆ ಇಲಾಖೆಯಿಂದ ಸಿಗುವ ಸವಲತ್ತುಗಳನ್ನು ಪಡೆಯಲು ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರು ಅರ್ಜಿ ಹಾಕಿದಲ್ಲಿ ಜೇಷ್ಠತೆ ಆಧಾರದ ಮೇಲೆ ಸಾಮಾನ್ಯರಿಗೆ ನೀಡುವಂತೆ ನೀಡಲಾಗುವುದು. ಇದರಲ್ಲಿ ಯಾವುದೇ ನಿರ್ದಿಷ್ಠ ಗುರಿಯಿರುವುದಿಲ್ಲ ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೇವೇಗೌಡ ಸಭೆಗೆ ತಿಳಿಸಿದರು.
ತಾಲ್ಲೂಕು ಪಂಚಾಯತಿ ಇ.ಓ ವೆಂಕಟೇಶ್ ಮಾತನಾಡಿ ತಾಲ್ಲೂಕಿನಾಧ್ಯಂತ ಇರುವ ಅಲೆಮಾರಿ ಹಾಗೂ ಅರೆ ಅಲೆಮಾರಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಮಾಹಿತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಸಮಾಜ ಕಲ್ಯಾಣಾಧಿಕಾರಿ ಪುರುಷೋತ್ತಮ್, ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ತಾಲ್ಲೂಕು ಅಧ್ಯಕ್ಷ ಸುಬ್ರಮಣಿ, ಬಿಸಿಎಂ ಇಲಾಖೆಯ ನಾರಾಯಣಸ್ವಾಮಿ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.