Home News ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ

ಸರ್ಕಾರಿ ಶಾಲೆಯಲ್ಲಿ ಇಂಗ್ಲಿಷ್ ಮಾಧ್ಯಮ ಆರಂಭ

0

ನಗರದ ಕೋಟೆ ವೃತ್ತದಲ್ಲಿರುವ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಿಕ್ಷಣ ಪ್ರಾರಂಭಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್.ಶ್ರೀನಿವಾಸ್ ಮಾತನಾಡಿದರು.
ಸರ್ಕಾರಿ ಶಾಲೆಗೆ ಮಕ್ಕಳನ್ನು ಆಕರ್ಷಿಸುವ ಉದ್ದೇಶದಿಂದ ಮತ್ತು ಪೋಷಕರ ಅಪೇಕ್ಷೆಯ ಮೇರೆಗೆ ತಾಲ್ಲೂಕಿನ ನಾಲ್ಕು ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸುತ್ತಿರುವುದಾಗಿ ಅವರು ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೇವೆ. ಶಿಕ್ಷಕರಿಗೆ ವಿಶೇಷ ತರಬೇತಿ ನೀಡಲಾಗಿದೆ. ಶಿಕ್ಷಕರಿಗೆ ಇಂಗ್ಲಿಷ್‌ ಬೋಧನೆಯ ಕುರಿತು ವಿಶೇಷ ತರಬೇತಿ ನೀಡಲಾಗಿದೆ. ಮಾಸ್ಟರ್‌ ಆಫ್ ರಿಸೋರ್ಸ್‌ ಪರ್ಸನ್‌(ಎಂಆರ್‌ಪಿ) ತರಬೇತಿಯಡಿ ಶಿಕ್ಷಕರನ್ನು ಸಿದ್ಧಪಡಿಸಲಾಗಿದೆ. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ನಾಲ್ಕು ಶಾಲೆಯನ್ನು ಆಯ್ಕೆ ಮಾಡಿದ್ದೇವೆ. ಕೋಟೆ ವೃತ್ತದಲ್ಲಿರುವ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ, ದೊಡ್ಡತೇಕಹಳ್ಳಿ, ಸಾದಲಿ ಮತ್ತು ಬಶೆಟ್ಟಹಳ್ಳಿ ಶಾಲೆಗಳನ್ನು ಆಯ್ಕೆ ಮಾಡಿದ್ದೇವೆ. ಮಕ್ಕಳ ಸಂಖ್ಯೆ ಹೆಚ್ಚಬೇಕಿದೆ. ತರಬೇತಿ ಪಡೆದಿರುವ ಬುದ್ದಿವಂತ ಶಿಕ್ಷಕರು ಸರ್ಕಾರಿ ಶಾಲೆಗಳಲ್ಲಿದ್ದಾರೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದರು.
ಪೋಷಕರು ಮಕ್ಕಳನ್ನು ಈ ಶಾಲೆಗಳಲ್ಲಿ ಕನ್ನಡ ಅಥವಾ ಆಂಗ್ಲ ಮಾಧ್ಯಮದಲ್ಲಿ ಸೇರಿಸಲು ಅವಕಾಶ ಇರುತ್ತದೆ. ಅಲ್ಲದೆ ಕಳೆದ 10 ವರ್ಷದಲ್ಲಿ ಕಡಿಮೆ ಮಕ್ಕಳಿರುವ ಕನ್ನಡ ಶಾಲೆಗಳನ್ನು ಮುಚ್ಚಲಾಗಿದೆ. ಆದ್ದರಿಂದ ಇದನ್ನು ಗಂಭಿರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಕಳೆದ ವರ್ಷವೇ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸುವ ಬಗ್ಗೆ ನಿರ್ಧರಿಸಿತ್ತು. ಈ ವರ್ಷದಿಂದ ಅದು ಜಾರಿಯಾಗುತ್ತಿದೆ. ಒಟ್ಟಾರೆ ಸರ್ಕಾರಿ ಶಾಲೆಗಳನ್ನು ಉಳಿಸಬೇಕು. ಖಾಸಗಿ ಶಾಲೆಗಳಿಗೆ ತಕ್ಕ ಪೈಪೋಟಿ ನೀಡಬೇಕೆಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ನಡೆಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ಗಿಡವನ್ನು ನೆಡಲಾಯಿತು. ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಲಾಯಿತು.
ಶಿಕ್ಷಕರಾದ ಪ್ರಕಾಶ್, ಪ್ರಭಾಕರ್, ವೆಂಕಟೇಶ್, ವೀಣಾ, ಲತಾ, ಮಂಜುಳಾ, ಪ್ರಭಾವತಿ, ಎಸ್.ಡಿ.ಎಂ.ಸಿ ಅಧ್ಯಕ್ಷ ವೆಂಕಟೇಶ್, ಸಿಬ್ಬಂದಿ ಮುನಿಲಕ್ಷ್ಮಮ್ಮ ಹಾಜರಿದ್ದರು.

error: Content is protected !!