ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದು ಮತ್ತು ಪ್ರತಿಯೊಬ್ಬರಿಗೂ ಅದನ್ನು ತಲುಪಿಸುವಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಹಾಗು ಕಾರ್ಯದರ್ಶಿಗಳ ಪಾತ್ರ ಮಹತ್ತರವಾದದ್ದು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಡಾ.ಸಿ.ಸಿದ್ದರಾಮಯ್ಯ ಹೇಳಿದರು.
ನಗರದ ತಾಲ್ಲೂಕು ಪಂಚಾಯತಿ ಕಛೇರಿಯಲ್ಲಿ ಶನಿವಾರ ಗ್ರಾಮೀಣಾಭಿವೃದ್ಧಿ ಇಲಾಖೆಯ ವತಿಯಿಂದ ಏರ್ಪಡಿಸಲಾಗಿದ್ದ ಸ್ಯಾಟ್ಕಾಂ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳನ್ನುದ್ದೇಶಿಸಿ ಅವರು ಮಾತನಾಡಿದರು.
ಗ್ರಾಮ ಪಂಚಾಯತಿ ಅಧಿಕಾರಿಗಳು ನರೇಗಾ ಯೋಜನೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ತರಬೇತಿ ಕಾರ್ಯಾಗಾರಗಳಲ್ಲಿ ನೀಡುವಂತಹ ಅಗತ್ಯವಾಗಿರುವ ಎಲ್ಲಾ ಮಾಹಿತಿಗಳನ್ನು ಆಧರಿಸಿ, ಜನತೆಗೆ ಯೋಜನೆಗಳ ಪರಿಚಯ ಮಾಡಿಸುವುದರ ಜೊತೆಗೆ, ಸದ್ಬಳಕೆಯ ಬಗ್ಗೆಯೂ ಜನರನ್ನು ಪ್ರೇರಣೆಗೊಳಿಸಬೇಕು. ಪ್ರತಿಯೊಂದು ಕುಟುಂಬಕ್ಕೂ ಕೇಂದ್ರ ಮತ್ತು ರಾಜ್ಯ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದವರೆಲ್ಲರಿಗೂ ಉದ್ಯೋಗ ಖಾತ್ರಿ ಚೀಟಿಗಳನ್ನು ವಿತರಣೆ ಮಾಡುವ ಮೂಲಕ ನರೇಗಾ ಯೋಜನೆಯಡಿಯಲ್ಲಿ ತೊಡಗಿಸಿಕೊಳ್ಳುವಂತೆ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟೇಶ್ ಮಾತನಾಡಿ ಗ್ರಾಮ ಪಂಚಾಯತಿಗಳ ಅಧಿಕಾರಿಗಳಿಗೆ ನೀಡುವಂತಹ ಈ ತರಬೇತಿ ಕಾರ್ಯಕ್ರಮದಲ್ಲಿ ಇಲಾಖೆಯ ಮೇಲಾಧಿಕಾರಿಗಳೊಂದಿಗೆ ನೇರವಾಗಿ ಸಂಪರ್ಕ ಮಾಡಿ ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಅವಕಾಶಗಳಿರುವುದರಿಂದ ಪ್ರತಿಯೊಬ್ಬ ಅಧಿಕಾರಿಗಳು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ರೈತರು, ಕೃಷಿ ಕೂಲಿಕಾರ್ಮಿಕರಿಗೆ ಯೋಜನೆಗಳ ಬಗ್ಗೆ ಅರಿವು ಮೂಡಿಸಿ, ನರೇಗಾ ಯೋಜನೆಯ ಕಡೆಗೆ ಜನರು ಒಲವು ತೋರಿಸುವಂತೆ ನೋಡಿಕೊಂಡು ಮೂಲಸೌಕರ್ಯಗಳನ್ನು ಜನರಿಗೆ ಒದಗಿಸುವ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಸಹಕಾರವನ್ನು ಪಡೆದುಕೊಂಡು ಉತ್ತಮ ಕೆಲಸ ನಿರ್ವಹಣೆ ಮಾಡುವಂತೆ ಹೇಳಿದರು.
ನರೇಗಾ ಯೋಜನೆ ಯೋಜನಾಧಿಕಾರಿ ಶ್ರೀನಾಥ್ ಗೌಡ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಪಿ.ವಿ.ಸಿದ್ದಣ್ಣ, ಗೋಪಾಲಕೃಷ್ಣಯ್ಯ, ಗೋಪಿನಾಥ್, ಸಿ.ರಾಜಣ್ಣ, ಶ್ರೀನಿವಾಸ್, ಕಾತ್ಯಾಯಿನಿ ಮತ್ತಿತರರು ಹಾಜರಿದ್ದರು.
- Advertisement -
- Advertisement -
- Advertisement -