
Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣಾ ಕಾರ್ಯಗಳಿಗೆ ಅಂದ್ರೆ ಬೂತ್ ಮಟ್ಟದ ಅಧಿಕಾರಿಗಳಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಶಿಡ್ಲಘಟ್ಟ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ತಹಶೀಲ್ದಾರ್ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಪ್ರತ್ಯೇಕ ಮನವಿ ಸಲ್ಲಿಸಿದರು.
ತಹಶೀಲ್ದಾರ್ ಗಗನ ಸಿಂಧು ಅವರನ್ನು ಭೇಟಿ ಮಾಡಿದ ಅಂಗನವಾಡಿ ಕಾರ್ಯಕರ್ತೆಯರು, ಇಲಾಖೆಯ ಆದೇಶದ ಅನ್ವಯ ಅನ್ಯ ಇಲಾಖೆಯ ಸೇವೆಗಳನ್ನು ಮಾಡಬಾರದು ಎಂದು ನಿರ್ದೇಶನ ನೀಡಲಾಗಿದೆ. ಜೊತೆಗೆ ಬಿಎಲ್ಒ ಗಳನ್ನು ನೇಮಕಾತಿ ಮಾಡುವಾಗ ಗ್ರೂಪ್ ಸಿ ದರ್ಜೆಯ ನೌಕರರನ್ನು ನೇಮಕ ಮಾಡಬೇಕು ಎಂದು
ಆದೇಶ ಹೊರಡಿಸಲಾಗಿದೆ. ಇಂತಹ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತರನ್ನು ನೇಮಕ ಮಾಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ತಾಲ್ಲೂಕಿನ ಹಲವು ಕೇಂದ್ರಗಳಲ್ಲಿ ಸಹಾಯಕಿಯರ ನಿಯೋಜನೆ ಇಲ್ಲ. ಅಲ್ಲಿ ಅಂಗನವಾಡಿ ಕಾರ್ಯಕರ್ತರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎಲ್ ಓಗಳ ಸಭೆ ನಡೆಸಿದಾಗ ಅಂಗನವಾಡಿ ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಬೇಕಾಗುತ್ತದೆ. ಆಗ ಮಕ್ಕಳ ಜವಾಬ್ದಾರಿಯನ್ನು ಯಾರು ತೆಗೆದುಕೊಳ್ಳುತ್ತಾರೆ ಎಂದು ಕೇಳಿದರು.
ಅಂಗನವಾಡಿ ಕಾರ್ಯಕರ್ತರಲ್ಲಿ ಅನೇಕರು ಕೆಲವೊಂದು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಏಕಕಾಲಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಯೋಜನೆಗಳನ್ನು ಅನುಷ್ಠಾನಗೊಳಿಸಿ ಅದರ ಜೊತೆಗೆ ಬಿಎಲ್ಒ ಕೆಲಸ ಮಾಡುವುದು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರಲ್ಲದೆ, ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅಂಗನವಾಡಿ ಕಾರ್ಯಕರ್ತೆಯರನ್ನು ಬಿಎಲ್ಒ ಕೆಲಸಕ್ಕೆ ನಿಯೋಜಿಸಿರುವುದನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದರು.
ಅಂಗನವಾಡಿ ಕಾರ್ಯಕರ್ತರ ಮನವಿಯನ್ನು ಆಲಿಸಿದ ತಹಶೀಲ್ದಾರ್, ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡುವುದು ಅಥವಾ ರದ್ದು ಮಾಡುವ ಅಧಿಕಾರ ನನಗಿಲ್ಲ. ಚುನಾವಣಾ ಆಯೋಗದ ನಿರ್ದೇಶನದಂತೆ ನೇಮಕಾತಿ ಆಗಿರುತ್ತದೆ. ತಮ್ಮ ಸಮಸ್ಯೆಗಳು ಮತ್ತು ಬೇಡಿಕೆಗಳನ್ನು ಜಿಲ್ಲಾಧಿಕಾರಿಗೆ ಸಲ್ಲಿಸುತ್ತೇನೆ. ಮೊದಲು ತಾವು ತರಬೇತಿಗಾಗಿ ಹಾಜರಾಗಿ ಅನಂತರ ತಮ್ಮ ಸಮಸ್ಯೆಗಳ ಕುರಿತು ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ. ಯಾರಾದರೂ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಅದರ ಬಗ್ಗೆ ಸಮಗ್ರವಾಗಿ ಮಾಹಿತಿ ನೀಡುವಂತೆ ಸೂಚಿಸಿದರು
ಸಿಐಟಿಯು ಸಂಘಟನೆಯ ಜಿಲ್ಲಾಧ್ಯಕ್ಷೆ ಲಕ್ಷ್ಮೀದೇವಮ್ಮ ಮಾತನಾಡಿ, ತಾಲ್ಲೂಕಿನಲ್ಲಿ 133 ಅಂಗನವಾಡಿ ಕಾರ್ಯಕರ್ತೆಯರನ್ನು ಬೂತ್ ಮಟ್ಟದ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಇದರಿಂದಾಗಿ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಪಾಠಪ್ರವಚನ ಮೇಲೆ ಪ್ರಭಾವ ಬೀರುತ್ತದೆ ಎಂದು ಹೇಳಿದರು.
ಜಿಲ್ಲಾಧಿಕಾರಿಗಳು ಚುನಾವಣಾ ಆಯೋಗಕ್ಕೆ ಗಮನಕ್ಕೆ ತಂದು ಅಂಗನವಾಡಿ ಕಾರ್ಯಕರ್ತರನ್ನು ಬಿ ಎಲ್ ಓ ಕೆಲಸಗಳಿಗೆ ನಿಯೋಜಿಸಬಾರದು ಎಂದು ಮನವರಿಕೆ ಮಾಡಿಕೊಡಬೇಕೆಂದು ವಿನಂತಿಸಿದರು.
ಈಗಾಗಲೇ ಇಲಾಖೆ ಮೂಲಕ ಅನೇಕ ರೀತಿಯ ಸೇವೆಗಳನ್ನು ಅಂಗನವಾಡಿ ಕಾರ್ಯಕರ್ತರು ಮಾಡುತ್ತಿದ್ದಾರೆ ಅದರ ಜೊತೆಗೆ ಹೆಚ್ಚುವರಿಯಾಗಿ ಬಿ ಎಲ್ ಓ ಅಧಿಕಾರಿಗಳನ್ನು ನೇಮಕ ಮಾಡಿದರೆ ಅನೇಕ ರೀತಿಯ ಸಮಸ್ಯೆಗಳನ್ನು ಅನುಭವಿಸುವಂತಾಗುತ್ತದೆ. ಸರ್ಕಾರ ಮತ್ತು ಜಿಲ್ಲಾಡಳಿತ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಆಗ್ರಹಿಸಿದರು.
ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ ಬಳಿಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿದ್ಯಾ ವಿಸ್ತ್ರದ್ ಅವರಿಗೂ ಪ್ರತ್ಯೇಕ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ತಾಲ್ಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಅಶ್ವಥಮ್ಮ, ಮಾಜಿ ಅಧ್ಯಕ್ಷೆ ಸುನಂದಮ್ಮ,ಪ್ರಧಾನ ಕಾರ್ಯದರ್ಶಿ ಭಾಗ್ಯಮ್ಮ, ಉಪಾಧ್ಯಕ್ಷೆ ರತ್ನಮ್ಮ, ಸುಚಿತ್ರ ಹಾಜರಿದ್ದರು