Home News ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ: ಸರ್ಕಾರಿ ಜಮೀನು ಬಳಸಿ ಎಂದ ಬಿಜೆಪಿ ಮುಖಂಡ

ಕೃಷಿ ಭೂಮಿ ಸ್ವಾಧೀನಕ್ಕೆ ವಿರೋಧ: ಸರ್ಕಾರಿ ಜಮೀನು ಬಳಸಿ ಎಂದ ಬಿಜೆಪಿ ಮುಖಂಡ

0
14

Sidlaghatta : ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೆಗಳಿಗಾಗಿ ಸ್ವಾಧೀನಪಡಿಸಿಕೊಳ್ಳುವ ಬದಲು ಕೃಷಿಗೆ ಯೋಗ್ಯವಲ್ಲದ ಸರ್ಕಾರಿ ಜಮೀನನ್ನು ಕೈಗಾರಿಕೆಗಳ ಸ್ಥಾಪನೆಗೆ ಬಳಸಬೇಕು ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದ್ ಗೌಡ ಹೇಳಿದ್ದಾರೆ.

ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿಯಲ್ಲಿ ನಡೆದ ಎಸ್.ಐ.ಆರ್ ಜಾಗೃತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಜಂಗಮಕೋಟೆ ಭಾಗದ ಕೃಷಿ ಭೂಮಿಯನ್ನು ಕೈಗಾರಿಕೆಗಳಿಗಾಗಿ ಸ್ವಾಧೀನಪಡಿಸಿಕೊಳ್ಳುತ್ತಿರುವ ಕ್ರಮ ರೈತರಿಗೆ ಅನ್ಯಾಯವಾಗಲಿದೆ ಎಂದರು.

ಈಗಾಗಲೇ ಕೈವಾರ ಸಮೀಪ ಕೈಗಾರಿಕಾ ಪ್ರದೇಶಕ್ಕಾಗಿ ಸ್ವಾಧೀನಪಡಿಸಿಕೊಂಡಿರುವ ಜಮೀನಿನಲ್ಲಿ ಕೈಗಾರಿಕೆಗಳು ಆರಂಭವಾಗಿಲ್ಲ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು. ಕೃಷಿಗೆ ಯೋಗ್ಯವಲ್ಲದ ಸರ್ಕಾರಿ ಜಮೀನಿನಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದರೆ ಕೃಷಿ ಭೂಮಿ ಉಳಿಯುವುದರ ಜೊತೆಗೆ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು.

SIR ಪ್ರಕ್ರಿಯೆಯಲ್ಲಿ ಕಾರ್ಯಕರ್ತರಿಗೆ ಸೂಚನೆ ಏನು?

ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಪಕ್ಷದ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತದಾರರಿಗೆ ಗಣತಿ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿಸಿ ಮರಳಿ ಸಂಗ್ರಹಿಸುವ ಕಾರ್ಯವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಕರೆ ನೀಡಿದರು. ಮತದಾರರ ಪಟ್ಟಿಯಲ್ಲಿ ಮೃತಪಟ್ಟವರು, ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರ ಮಾಹಿತಿ ಕಂಡುಬಂದರೆ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು, ರಸ್ತೆ ಸೇರಿದಂತೆ ಮೂಲಸೌಕರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು. ಮುಂದಿನ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಎಸ್.ಐ.ಆರ್ ಗಣತಿ ಪ್ರಗತಿಯ ಇನ್ನಷ್ಟು ಇತ್ತೀಚಿನ ಮಾಹಿತಿಯನ್ನೂ ಇಲ್ಲಿ ಓದಬಹುದು.

In English: BJP Rural Mandal president Sikal Anand Gowda said unproductive government land, not fertile farmland, should be used for new industries, opposing the acquisition of agricultural land near Jangamakote for industrial use. Speaking at an SIR awareness workshop in Bashettahalli hobli, he also directed party workers to carefully complete house-to-house SIR enumeration form collection and flag deceased, relocated, or duplicate voter entries to officials.

Sidlaghatta WhatsApp Channel Group

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!