Malamachanahalli, sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಟರಾಯನಸ್ವಾಮಿ ದೇವಸ್ಥಾನದ ಬಳಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಇಒ ಹೇಮಾವತಿ, “ಶ್ರಮದಾನವು ಸಮುದಾಯದ ಕಲ್ಯಾಣಕ್ಕಾಗಿ ನೀಡುವ ದೈಹಿಕ ಕೊಡುಗೆಯಾಗಿದ್ದು, ನೈರ್ಮಲ್ಯ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಏಕತೆಯನ್ನು ಬೆಳೆಸುವ ಮಹತ್ವದ ಕಾರ್ಯವಾಗಿದೆ. ಇದು ನಾಗರಿಕರಲ್ಲಿ ಸರಳತೆ, ಸ್ವಚ್ಛತೆ, ಹಸಿರು ಪರಿಸರ ಮತ್ತು ಒಗ್ಗಟ್ಟಿನ ಭಾವನೆಗೆ ಪ್ರೇರಣೆ ನೀಡುತ್ತದೆ” ಎಂದು ಹೇಳಿದರು. ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ ರಾಜ್ಯದಾದ್ಯಂತ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸ್ವಚ್ಛತಾ ಸಪ್ತಾಹವನ್ನು ಆಚರಿಸಲು ಸರ್ಕಾರ ಸೂಚನೆ ನೀಡಿರುವುದನ್ನೂ ಅವರು ನೆನಪಿಸಿದರು.
ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ ಮಾತನಾಡಿ, “ತಾಲ್ಲೂಕಿನ 28 ಗ್ರಾಮ ಪಂಚಾಯಿತಿಗಳಲ್ಲಿ ಸ್ವಚ್ಛತಾ ಆಂದೋಲನ ಆರಂಭವಾಗಿದೆ. ಒಂದು ದಿನ, ಒಂದು ಗಂಟೆ ಎಲ್ಲರೂ ಸೇರಿ ಶ್ರಮದಾನ ಮಾಡುವ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ” ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಳಮಾಚನಹಳ್ಳಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶೈಲ, ನರೇಗಾ ಸಿಬ್ಬಂದಿ, ಸ್ವ-ಸಹಾಯ ಸಂಘದ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಸಕ್ರಿಯವಾಗಿ ಪಾಲ್ಗೊಂಡರು.