Sidlaghatta : ಶಿಡ್ಲಘಟ್ಟ ತಾಲೂಕಿನಲ್ಲಿ 9 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು ನಾಗರೀಕರು ಸರ್ಕಾರದ ಮಾರ್ಗ ಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸೋಂಕು ನಿಯಂತ್ರಿಸಲು ಸಹಕರಿಸಬೇಕೆಂದು ತಹಶೀಲ್ದಾರ್ ಬಿ.ಎನ್. ಸ್ವಾಮಿ ಮನವಿ ಮಾಡಿದರು.
ನಗರದ ತಾಲ್ಲೂಕು ಕಚೇರಿಯ ಮುಂಭಾಗ ಶನಿವಾರ ರಾಷ್ಟ್ರೀಯ ಆರೋಗ್ಯ ಅಭಿಯಾನದ ಕುರಿತು ಜನಜಾಗೃತಿ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದ ಕೋವಿಡ್ ಮಾರ್ಗಸೂಚಿಗಳಂತೆ ಅರವತ್ತು ವರ್ಷ ಮೇಲ್ಪಟ್ಟ ನಾಗರಿಕರು ಮಾಸ್ಕ್ ಧರಿಸಬೇಕು, ಸ್ಯಾನಿಟೈಸರ್ ಸಿಂಪಡಿಸಿಕೊಂಡು, ಅಂತರವನ್ನು ಕಾಯ್ದುಕೊಳ್ಳಬೇಕೆಂದು ಹೇಳಿದರು.
ತಾಲ್ಲೂಕಿನಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಆರೋಗ್ಯ ಇಲಾಖೆಯ ಮೂಲಕ ಹಲವಾರು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜೊತೆಗೆ ಸೋಂಕಿತರಿಗೆ ನಿಗದಿಪಡಿಸಿದ ಆಸ್ಪತ್ರೆಗಳಲ್ಲಿ ಸೂಕ್ತ ವ್ಯವಸ್ಥೆಗಳೊಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ನಾಗರಿಕರು ಯಾವುದೇ ರೀತಿಯ ಆತಂಕಗೊಳ್ಳುವ ಅಗತ್ಯ ಇಲ್ಲ. ಆದರೂ ಸಹ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ದೇವರಾಜ್ ಹಾಜರಿದ್ದರು.