ತಾಲ್ಲೂಕಿನ ಎಲ್.ಮುತ್ತುಗದಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಕಸಾಪ ವತಿಯಿಂದ ಆಯೋಜಿಸಿದ್ದ ದ.ರಾ.ಬೇಂದ್ರೆ ಅವರ 125 ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ಮಾತನಾಡಿದರು.
ವರಕವಿ ದ.ರಾ. ಬೇಂದ್ರೆಯವರ ಮಾತೃಭಾಷೆ ಮರಾಠಿಯಾದರೂ ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ (ನಾಕುತಂತಿ ಕೃತಿ) ತಂದುಕೊಟ್ಟ ಕೀರ್ತಿ ಇವರಿಗೆ ಸಲ್ಲುತ್ತದೆ ಎಂದು ಅವರು ತಿಳಿಸಿದರು.
“ಕುಣಿಯೋಣು ಬಾರಾ ಕುಣಿಯೋಣು ಬಾ”, “ಇಳಿದು ಬಾ ತಾಯಿ ಇಳಿದು ಬಾ”, “ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು”, ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟವರು ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.ಬೇಂದ್ರೆ. ಕವಿ, ದಾರ್ಶನಿಕ ಬೇಂದ್ರೆ ಈ ಯುಗದ ಒಬ್ಬ ಮಹಾಕವಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ಕಸಾಪ ವತಿಯಿಂದ ವಿವಿಧ ಸಾಹಿತಿಗಳ ಕುರಿತಾದ ಪುಸ್ತಕಗಳನ್ನು ನೀಡಲಾಯಿತು.
ಮುಖ್ಯ ಶಿಕ್ಷಕಿ ಪಿ.ವಿ.ಸುಜಾತ, ಶಿಕ್ಷಕಿಯರಾದ ಎಲ್.ಕೋಮಲ, ಸಿ.ವರಮ್ಮ ಹಾಜರಿದ್ದರು.