Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬೈರಗಾನಹಳ್ಳಿ ಗ್ರಾಮದ ದಲಿತ ಮುಖಂಡ ನಾರಾಯಣಸ್ವಾಮಿ ಹತ್ಯೆ ಖಂಡಿಸಿ ಶುಕ್ರವಾರ ದಲಿತ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸರ್ಕಾರಿ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿಯವರೆಗೂ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿ ಮುಂಭಾಗ ಬೃಹತ್ ಬಹಿರಂಗ ಸಭೆ ನಡೆಸಿದರು.
ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಮೇಲೂರು ಮಂಜುನಾಥ್ ಮಾತನಾಡಿ, ಗ್ರಾಮದ ಪರಿಶಿಷ್ಠ ಜಾತಿಗೆ ಸೇರಿದ ಮಹಿಳೆಗೆ ತೊಂದರೆಯಾದಾಗ ಆಕೆಯ ಬೆನ್ನೆಲುಬಾಗಿ ನಿಂತು ಪೊಲೀಸ್ ಠಾಣೆಯಲ್ಲಿ ಆಕೆಯಿಂದ ದುರು ಕೊಡಿಸಿದರು ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವುದು ನಿಜಕ್ಕೂ ಆತಂಕದ ವಿಷಯ. ಇದನ್ನು ಕಂಡ ನಾಗರಿಕರು ಹಾಗೂ ದಲಿತ ಸಮುದಾಯ ಭಯದ ವಾತಾವರಣದಲ್ಲಿ ಜೀವನ ನಡೆಸುವಂತಾಗಿದೆ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಗಡೀಪಾರು ಮಾಡುವುದು ಸೇರಿದಂತೆ ಮತ್ತೊಮ್ಮೆ ಇಂತಹ ಘಟನೆ ಮರುಕಳಿಸದಂತೆ ತಾಲ್ಲೂಕು ಆಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ದಸಂಸ ಜಿಲ್ಲಾ ಸಂಚಾಲಕ ಎನ್.ಎ.ವೆಂಕಟೇಶ್ ಮಾತನಾಡಿ, ದಲಿತರ ಮೇಲೆ ಪದೇ ಪದೇ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ತಾಲ್ಲೂಕು ಆಡಳಿತ ಸೂಕ್ತ ಕ್ರಮ ಜರುಗಿಸುವ ಜೊತೆಗೆ ದಲಿತ ಮುಖಂಡರು ಹಾಗೂ ದಲಿತ ಸಮುದಾಯದವರಿಗೆ ಸೂಕ್ತ ರಕ್ಷಣೆ ಕಲ್ಪಿಸಬೇಕು. ಕೊಲೆಯಾದ ನಾರಾಯಣಸ್ವಾಮಿ ಕುಟಂಬಕ್ಕೆ 50 ಲಕ್ಷ ಪರಿಹಾರ ಸೇರಿದಂತೆ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ ನೀಡುವ ಜೊತೆಗೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಮೆರವಣಿಗೆಯಲ್ಲಿ ತಾಲ್ಲೂಕಿನ ಎಲ್ಲಾ ಪ್ರಗತಿಪರ ಸಂಘಟನೆ, ಸಾಮಾಜಿಕ ಚಿಂತಕರು, ವಿದ್ಯಾರ್ಥಿ ಸಂಘಟನೆಗಳು, ಮಹಿಳೆಯರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ದಲಿತ ಮುಖಂಡರಾದ ಟಿ.ಎ.ಚಲಪತಿ, ಅರುಣ್‌ಕುಮಾರ್, ಯಾಮ ನಾರಾಯಣಸ್ವಾಮಿ, ನಾಗನರಸಿಂಹ, ಅಶೋಕ್, ತಿರುಮಲೇಶ್ ಸೇರಿದಂತೆ ವಿವಿಧ ಸಂಘಟನೆಗಳ ಮುಕಂಡರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.