Sidlaghatta : ಸಾಮಾಜಿಕ ನ್ಯಾಯದ ಹರಿಕಾರ ಡಿ.ದೇವರಾಜ ಅರಸು ಅವರು ಬಡವರ ಪರವಾಗಿ ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಕೆಲಸ ಮಾಡಿರುವವರು. ಅವರ ಚಿಂತನೆಗಳು ನಮಗೆಲ್ಲರಿಗೂ ಆದರ್ಶಪ್ರಾಯ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
ಶಿಡ್ಲಘಟ್ಟ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ 108 ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.
ರಾಜ್ಯ ಕಂಡ ಶ್ರೇಷ್ಠ ಮಾನವತಾವಾದಿ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರು ಸಮ ಸಮಾಜ ನಿರ್ಮಾಣದ ರೂವಾರಿ. ಉಳುವವನಿಗೆ ಭೂಮಿ, ಹಾವನೂರು ಆಯೋಗದಂತಹ ಅವರ ಪ್ರಮುಖ ನಿರ್ಧಾರಗಳ ಪ್ರತಿಫಲ ಇಂದಿನ ಪೀಳಿಗೆಗೆ ಸಿಗುತ್ತಿದೆ ಎಂದು ಹೇಳಿದರು.
ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಪರಿಶಿಷ್ಟ ಜಾತಿ, ವರ್ಗ ಮತ್ತು ಹಿಂದುಳಿದ ಪಂಗಡಗಳ ಮೂಕ ಬಾಯಿಗೆ ರಾಜಕೀಯ ದನಿ ನೀಡಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರು ನಿಜವಾದ ಗ್ರಾಮೀಣಾಭಿವೃದ್ಧಿಯ ಹರಿಕಾರ. ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದರು. ಗ್ರಾಮೀಣ ಜನತೆಯಲ್ಲಿ ಜೀವನೋಲ್ಲಾಸ ಹೆಚ್ಚಿಸಲು ಶ್ರಮಿಸಿದರು ಎಂದು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯಗಳಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಚ್.ಡಿ ದೇವೇಗೌಡ ಮತ್ತು ಜೆ.ಪಿ ನಾರಾಯಣ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರೋತ್ಸಾಹ ಧನ ನೀಡುವ ಮೂಲಕ ಸತ್ಕರಿಸಲಾಯಿತು.
ತಾಲ್ಲೂಕು ಪಂಚಾಯಿತಿ ಇಒ ಮುನಿರಾಜ, ಮಾಜಿ ಜಿ.ಪಂ.ಸದಸ್ಯ ಬಂಕ್ ಮುನಿಯಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ಮೇಲೂರು ಮಂಜುನಾಥ್, ತಾದೂರು ರಘು, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ನಗರಸಭೆ ಪೌರಾಯುಕ್ತ ಆಂಜನೇಯುಲು, ಸಿಡಿಪಿಒ ನವತಾಜ್ ಹಾಜರಿದ್ದರು.