Sidlaghatta, chikkaballapur : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 24ರಂದು ಶಿಡ್ಲಘಟ್ಟಕ್ಕೆ ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಸಿ. ಸುಧಾಕರ್, ಶಾಸಕ ಬಿ.ಎನ್. ರವಿಕುಮಾರ್, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ ಸೇರಿದಂತೆ ಹಲವಾರು ಅಧಿಕಾರಿಗಳು ಶಿಡ್ಲಘಟ್ಟದ ಹೈಟೆಕ್ ರೇಷ್ಮೆ ಮಾರುಕಟ್ಟೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದರು, “ನವೆಂಬರ್ 24ರಂದು ಜಿಲ್ಲಾದ್ಯಂತ ಸುಮಾರು ₹1,800 ಕೋಟಿ ರೂಗಳ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಮತ್ತು ಕಟ್ಟಡ ಉದ್ಘಾಟನೆ ಕಾರ್ಯಕ್ರಮಗಳು ನಡೆಯಲಿವೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿ ಉದ್ಘಾಟಿಸಲಿದ್ದಾರೆ,” ಎಂದು ಹೇಳಿದರು.
“ಶಿಡ್ಲಘಟ್ಟದ ಹೈಟೆಕ್ ರೇಷ್ಮೆ ಮಾರುಕಟ್ಟೆ, ನಗರದ ಒಳಚರಂಡಿ ಯೋಜನೆ, ರಾಮಸಮುದ್ರದಿಂದ ಕುಡಿಯುವ ನೀರಿನ ಯೋಜನೆ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕಟ್ಟಡ ಉದ್ಘಾಟನೆ ಸೇರಿದಂತೆ ಹಲವಾರು ಪ್ರಮುಖ ಕಾಮಗಾರಿಗಳು ಪ್ರಾರಂಭ ಹಾಗೂ ಪೂರ್ಣಗೊಂಡಿವೆ. ಈ ಯೋಜನೆಗಳೆಲ್ಲವೂ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಅತ್ಯಂತ ಮಹತ್ವದವು,” ಎಂದು ವಿವರಿಸಿದರು.
ಎಲ್ಲಾ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು ಯಾವ ರೀತಿ ಕಾರ್ಯಕ್ರಮ ಆಯೋಜನೆ ಮಾಡಬೇಕು ಎಂದು ಚರ್ಚಿಸಿದ್ದೇವೆ. ಈಗ ಹೈಟೆಕ್ ರೇಷ್ಮೆ ಮಾರುಕಟ್ಟೆಯ ಜಾಗದಲ್ಲಿ ವೇದಿಕೆಗೆ ಸಿದ್ಧತೆ ಮಾಡಿಕೊಳ್ಳಲು ಸ್ಥಳ ಪರಿಶೀಲನೆ ಮಾಡಲು ನಾನು, ಅಧಿಕಾರಿಗಳು ಮತ್ತು ಸ್ಥಳೀಯ ಶಾಸಕ ರವಿಕುಮಾರ್ ಇಲ್ಲಿಗೆ ಭೇಟಿ ನೀಡಿದ್ದೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಬಿ.ಎನ್. ರವಿಕುಮಾರ್, ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಟ್, ತಹಶೀಲ್ದಾರ್ ಎನ್. ಗಗನ ಸಿಂಧು, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ಪೌರಾಯುಕ್ತೆ ಜಿ. ಅಮೃತ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ ಹಾಗೂ ತಾದೂರು ರಘು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
