News

ಅಂತರ್ಜಲ ಕುಸಿತ: ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ

Sidlaghatta Taluk Panchayat Drinking Water Crisis Precaution Meeting

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಅಂತರ್ಜಲ ದಿನದಿಂದ ದಿನಕ್ಕೆ ಕುಸಿಯುತ್ತಿದ್ದು, ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಆಬಿದ ಎಸ್.ಎಸ್. ಅಧಿಕಾರಿಗಳಿಗೆ ಸೂಚಿಸಿದರು.

ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ಪಂಚಾಯಿತಿಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೀರಿನ ಸಮಸ್ಯೆ ನಿರ್ವಹಣೆ ಹೇಗೆ?

ಮಳೆ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳ ನಿರ್ವಹಣೆ, ಕೊಳವೆಬಾವಿಗಳ ಕಾರ್ಯಕ್ಷಮತೆ, ನೀರು ಸರಬರಾಜು ವ್ಯವಸ್ಥೆ ಹಾಗೂ ಅಗತ್ಯವಿದ್ದಲ್ಲಿ ಪರ್ಯಾಯ ವ್ಯವಸ್ಥೆ ಕಲ್ಪಿಸುವ ಕುರಿತು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು. ಸಾರ್ವಜನಿಕರಿಂದ ದೂರುಗಳು ಬಂದ ನಂತರ ಕ್ರಮ ಕೈಗೊಳ್ಳುವುದಕ್ಕಿಂತ ಸಮಸ್ಯೆ ಎದುರಾಗುವ ಮುನ್ನವೇ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡರೆ ನೀರಿನ ಅಭಾವವನ್ನು ಪರಿಣಾಮಕಾರಿಯಾಗಿ ನಿಭಾಯಿಸಬಹುದು ಎಂದು ಹೇಳಿದರು.

ಇಲಾಖಾ ಪ್ರಗತಿ ಪರಿಶೀಲನೆ

ಸಭೆಯಲ್ಲಿ 2026–27ನೇ ಸಾಲಿನ ಜೂನ್ ಮಾಹೆಯ ಅಂತ್ಯದವರೆಗಿನ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಇಲಾಖಾವಾರು ಕಾಮಗಾರಿಗಳ ಅನುಷ್ಠಾನ, ಸರ್ಕಾರದ ವಿವಿಧ ಯೋಜನೆಗಳ ಪ್ರಗತಿ, ಗುರಿ ಸಾಧನೆ ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸಲಾಯಿತು. ಯೋಜನೆಗಳ ಅನುಷ್ಠಾನದಲ್ಲಿ ವಿಳಂಬವಾಗದಂತೆ ನಿಗದಿತ ಅವಧಿಯೊಳಗೆ ಗುರಿ ಸಾಧಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಸರ್ಕಾರದ ಕಲ್ಯಾಣ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು. ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ ಅಭಿವೃದ್ಧಿ ಕಾಮಗಾರಿಗಳನ್ನು ಗುಣಮಟ್ಟದಿಂದ ಪೂರ್ಣಗೊಳಿಸಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಆದ್ಯತೆ ನೀಡುತ್ತಾ ಜನಸ್ನೇಹಿ ಆಡಳಿತ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

ಇದನ್ನೂ ಓದಿ

error: Content is protected !!