Sidlaghatta : ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ತಾಲ್ಲೂಕು ಯೋಜನಾ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಹೆಚ್.ಎಂ. ಮುನಿಯಪ್ಪ ವಹಿಸಿದ್ದರು.
ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಸರ್ಕಾರದ ಅನುದಾನ ದುರುಪಯೋಗವಾಗದಂತೆ ನೋಡಿಕೊಳ್ಳುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಕೆಲವರು ಮೃತಪಟ್ಟಿದ್ದರೂ ಅವರ ಬ್ಯಾಂಕ್ ಖಾತೆಗಳಿಗೆ ಯೋಜನೆಯ ಹಣ ಜಮೆಯಾಗುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಇಂತಹ ಲೋಪಗಳು ಸರ್ಕಾರದ ಹಣದ ದುರುಪಯೋಗಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ, ಫಲಾನುಭವಿಗಳ ಮಾಹಿತಿಯನ್ನು ಕಾಲಕಾಲಕ್ಕೆ ಪರಿಶೀಲಿಸಿ, ಅನರ್ಹರನ್ನು ಪಟ್ಟಿಯಿಂದ ಕೈಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡದೆ, ಫಲಾನುಭವಿಗಳ ಮಾಹಿತಿಯನ್ನು ನಿಯಮಿತವಾಗಿ ಪರಿಷ್ಕರಿಸುವುದು, ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದು ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆ ಅನುಷ್ಠಾನದಲ್ಲಿ ವಿಳಂಬ ಮಾಡುವ ಇಲಾಖೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಿಡಿಪಿಒ ವಿದ್ಯಾ ವಸ್ತ್ರದ್, ಬೆಸ್ಕಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೆಎಸ್‌ಆರ್‌ಟಿಸಿ, ಉದ್ಯೋಗ ವಿನಿಮಯ ಕಚೇರಿ ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
In English: Sidlaghatta Deputy Commissioner H.M. Muniyappa chaired a Grihalakshmi scheme review meeting at the Taluk Panchayat office on Wednesday. He directed officials to identify and remove ineligible beneficiaries, including deceased persons whose bank accounts continue receiving scheme funds, and warned of action against departments causing delays in guarantee scheme implementation.








