
Sidlaghatta : ಕೇಂದ್ರ ಸರ್ಕಾರ GST ದರ ಇಳಿಕೆ ಮಾಡಿರುವ ಹಿನ್ನೆಲೆಯಲ್ಲಿ ನಗರದಲ್ಲಿ BJP ವತಿಯಿಂದ ಸೋಮವಾರ ಸಂಭ್ರಮಾಚರಣೆ ನಡೆಯಿತು.
ಕೋಟೆ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ “ಜಿ.ಎಸ್.ಟಿ ಇಳಿಕೆಯ ಉಡುಗೊರೆಗೆ ಮೋದಿ ಸರ್ಕಾರಕ್ಕೆ ಧನ್ಯವಾದಗಳು” ಎಂಬ ಘೋಷವಾಕ್ಯದ ಅಡಿಯಲ್ಲಿ ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮ ವ್ಯಕ್ತಪಡಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಮಾತನಾಡಿ, “ಕೇಂದ್ರ ಸರ್ಕಾರ ಜಿ.ಎಸ್.ಟಿ ಇಳಿಕೆ ಮಾಡಿ ಜನತೆಗೆ ನವರಾತ್ರಿ ಉಡುಗೊರೆ ನೀಡಿದೆ. ದೇಶದ ಇತಿಹಾಸದಲ್ಲಿ ಇಷ್ಟು ದೊಡ್ಡ ಮಟ್ಟದಲ್ಲಿ ಜಿ.ಎಸ್.ಟಿ ಇಳಿಸಿದ ಉದಾಹರಣೆ ಇಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರದಿಂದ ಬಡ ಮತ್ತು ಮಧ್ಯಮ ವರ್ಗದ ಜನತೆಗೆ ಅನುಕೂಲವಾಗಿದೆ” ಎಂದು ಹೇಳಿದರು. ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿಗಳಿಂದ ಖಜಾನೆ ಖಾಲಿಯಾಗುತ್ತಿದ್ದರೆ, ಕೇಂದ್ರ ಸರ್ಕಾರದ ಈ ಕ್ರಮ ಜನರ ಕೊಳ್ಳುವ ಶಕ್ತಿ ಹಾಗೂ ಆರ್ಥಿಕತೆಗೆ ಬಲ ತುಂಬಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ ಮಾತನಾಡಿ, “ಸ್ವದೇಶಿ ವಸ್ತುಗಳ ಬಳಕೆ ಹೆಚ್ಚಿದಷ್ಟೂ ಬೇರೆ ದೇಶಗಳ ಅವಲಂಬನೆ ಕಡಿಮೆಯಾಗುತ್ತದೆ. ಆರ್ಥಿಕವಾಗಿ ದೇಶ ಬಲಿಷ್ಠವಾಗಲು ಇದು ನೆರವಾಗುತ್ತದೆ” ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ. ರಾಜಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಧು ಸೂರ್ಯನಾರಾಯಣ, ಚಿಂತಾಮಣಿ ವೇಣುಗೋಪಾಲ್, ಜಿಲ್ಲಾ ಕಾರ್ಯದರ್ಶಿಗಳು ನಂದೀಶ್, ಅಶೋಕ್, ಹಿರಿಯ ಮುಖಂಡ ಲಕ್ಷ್ಮೀನಾರಾಯಣ್ ಗುಪ್ತ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ನಿರ್ಮಲಮ್ಮ, ತಾಲ್ಲೂಕು ಅಧ್ಯಕ್ಷ ಸೀಕಲ್ ಆನಂದಗೌಡ, ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷೆ ಚಾತುರ್ಯ ಸೇರಿದಂತೆ ಹಲವರು ಹಾಜರಿದ್ದರು.