Sidlaghatta : ಗ್ಯಾರಂಟಿ ಯೋಜನೆಗಳ ಸವಲತ್ತುಗಳು ನೈಜ ಫಲಾನುಭವಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಮತ್ತಷ್ಟು ದಕ್ಷತೆ ಹಾಗು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ತಾ.ಪಂ ಇಓ ಆರ್.ಹೇಮಾವತಿ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ಜವಾಬ್ದಾರಿ ಮತ್ತು ಸಮನ್ವಯತೆ ಪ್ರಮುಖ ಪಾತ್ರ ವಹಿಸುತ್ತದೆ. ಈ ಅಂಶಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಉತ್ತಮ ಫಲಿತಾಂಶ ಸಾಧಿಸಲು ಪ್ರಯತ್ನಿಸಬೇಕು ಎಂದರು.
ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಸಮಗ್ರ ಪರಿಷ್ಕರಣೆ ಹಾಗೂ ಅನರ್ಹರು ಸೌಲಭ್ಯ ಪಡೆಯುತ್ತಿದ್ದರೆ ಅದನ್ನು ತಡೆಗಟ್ಟಿ, ಕೇವಲ ಅರ್ಹರಿಗೆ ಮಾತ್ರ ಯೋಜನೆಗಳನ್ನು ತಲುಪಿಸುವ ಬಗ್ಗೆ ಸಭೆಗಳಲ್ಲಿ ಸೂಚಿಸಲಾಯಿತು. ಜಿಲ್ಲಾ ಹಾಗೂ ತಾಲ್ಲೂಕು ಮಾರ್ಗದಲ್ಲಿ ಸಂಚರಿಸುವ ಬಸ್‌ಗಳು ನಿಗದಿತ ಸಮಯಕ್ಕೆ ಸರಿಯಾಗಿ ಸಂಚಾರ ಮಾಡಬೇಕು. ಎರಡು ಬಸ್‌ಗಳು ಒಂದೇ ಸಮಯಕ್ಕೇ ಬರುವಂತಹ ಬಸ್ ಗಳು ಬದಲಾವಣೆ ಮಾಡಿ ನಿತ್ಯ ಓಡಾಡುವ ಪ್ರಯಾಣಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷÀ ಮುನಿಯಪ್ಪ ಮಾತನಾಡಿ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಜೀವನ ಮಟ್ಟವನ್ನು ಉತ್ತಮಗೊಳಿಸುವಲ್ಲಿ ಹೆಚ್ಚು ಪರಿಣಾಮಕಾರಿಯಾಗಿದೆ ಎಂದರು.
ತಾ.ಪಂ ಇಓ ಹೇಮಾವತಿ.ಆರ್. ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮುನಿಯಪ್ಪ, ಸಿಡಿಪಿಓ ವಿದ್ಯಾ ವಸ್ತçದ್, ಬೆಸ್ಕಾಂ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ, ಕೆಎಸ್‌ಆರ್‌ಟಿಸಿ ಹಾಗು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಹಾಜರಿದ್ದರು.







