ನಗರದ ಕಾಂಗ್ರೆಸ್ ಭವನದಲ್ಲಿ ಶುಕ್ರವಾರ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಕರೆಯಲಾಗಿದ್ದ ಸುದ್ದಿಘೋಷ್ಠಿಯಲ್ಲಿ ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ ಮಾತನಾಡಿದರು.
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿರುವ ಅಭ್ಯರ್ಥಿ ರಮೇಶ್‌ಬಾಬು ಅವರನ್ನು ಅತ್ಯಂತ ಹೆಚ್ಚಿನ ಮತಗಳಿಂದ ಗೆಲ್ಲಿಸಲು ಕಾಂಗ್ರೆಸ್ ಕಾರ್ಯಕರ್ತರೂ ಸೇರಿದಂತೆ ಮುಖಂಡರು ಶ್ರಮಿಸಬೇಕು ಎಂದು ಅವರು ಹೇಳಿದರು.
ರಾಜ್ಯದ ಶಿಕ್ಷಕರು ಸೇರಿದಂತೆ ಪದವೀಧರರ ಸಮಸ್ಯೆಗಳಿಗೆ ಸ್ಪಂದಿಸುವ ಸರಳ, ಸಜ್ಜನಿಕೆಯ ವ್ಯಕ್ತಿ ರಮೇಶ್‌ಬಾಬು ಆಗ್ನೇಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದು ತಾಲ್ಲೂಕಿನ ಪ್ರತಿಯೊಬ್ಬ ಪದವೀಧರರೂ ಸೇರಿದಂತೆ ಶಿಕ್ಷಕರು ತಮ್ಮ ಅಮೂಲ್ಯವಾದ ಮೊದಲನೇ ಪ್ರಾಶಸ್ತ್ಯದ ಮತವನ್ನು ರಮೇಶ್‌ಬಾಬು ರವರಿಗೆ ನೀಡುವ ಮೂಲಕ ಅಭಿವೃದ್ದಿಗೆ ಸಹಕಾರ ನೀಡುವಂತೆ ಮನವಿ ಮಾಡಿದರು.
ಅಭ್ಯರ್ಥಿ ರಮೇಶ್‌ಬಾಬು ಮಾತನಾಡಿ, ಈಗಾಗಲೇ ಆಗ್ನೇಯ ಪದವೀಧರ ಕ್ಷೇತ್ರದ ಐದು ಜಿಲ್ಲೆಗಳ ಕಾಂಗ್ರೆಸ್ ಮುಖಂಡರ ವಿಶ್ವಾಸವನ್ನು ಗಳಿಸಿಕೊಂಡಿದ್ದೇನೆ. ಎಲ್ಲರೂ ನನ್ನ ಪರ ಚುನಾವಣೆಯಲ್ಲಿ ಕೆಲಸ ಮಾಡುತ್ತಿದ್ದು ಈ ಚುನಾವಣೆಯಲ್ಲಿ ಜಯಗಳಿಸುವ ವಿಶ್ವಾಸವಿದೆ. ಈ ಹಿಂದೆ 15 ತಿಂಗಳ ಕಾಲ ಎಂಎಲ್‌ಸಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಇದೀಗ ಪೂರ್ಣಾವಧಿಗಾಗಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದು ಪದವೀಧರರು ಹಾಗೂ ಶಿಕ್ಷಕರ ಪರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತೇನೆ. ಹಾಗಾಗಿ ಪ್ರತಿಯೊಬ್ಬರೂ ತಮ್ಮ ಮೊದಲ ಪ್ರಾಶಸ್ತ್ಯದ ಮತವನ್ನು ನನಗೆ ನೀಡಿ ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪಾಸಾದ ನಕಲಿ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಿರುವ ಕ್ರಮ ಪದವೀಧರರಿಗೆ ಮಾಡಿರುವ ಅವಮಾನ. ನಕಲಿ ಮತದಾರರನ್ನು ನೋಂದಾಯಿಸಿರುವ ಅಧಿಕಾರಿಗಳನ್ನು ಬಂಧಿಸಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ದೂರು ಸಲ್ಲಿಸುವ ಜೊತಗೆ ಚುನಾವಣೆಯ ನಂತರವೂ ಹೋರಾಟ ನಡೆಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎ.ನಾಗರಾಜ್, ನಗರಸಭೆ ಸದಸ್ಯರಾದ ಮಂಜುನಾಥ್, ಮುನಿರಾಜು ಹಾಜರಿದ್ದರು.







