Sidlaghatta : 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ತಾಲ್ಲೂಕಿನ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಶಿಡ್ಲಘಟ್ಟ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯನಿರತ ಪತ್ರಕರ್ತರ ಸಂಘದ ಶಿಡ್ಲಘಟ್ಟ ತಾಲ್ಲೂಕು ಸಮಿತಿಯಿಂದ ಆಗಸ್ಟ್ 14ರ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರ ಧ್ವಜಾರೋಹಣೆ ನೆರವೇರಿಸುವ ಮೂಲಕ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಈ ಪ್ರಯುಕ್ತ ತಾಲ್ಲೂಕಿನ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ “ನಾನು ಕಂಡಂತೆ ರಾಷ್ಟ್ರಪಿತ ಮಹಾತ್ಮಗಾಂಧಿ ಅವರೊಳಗಿನ ಪತ್ರಕರ್ತ” ಹಾಗೂ “ನಾನು ಕಂಡಂತೆ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ ಅವರೊಳಗಿನ ಪತ್ರಕರ್ತ” ವಿಷಯ ಕುರಿತಾಗಿ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಈ ಎರಡು ವಿಷಯಗಳಲ್ಲಿ ಯಾವುದಾದರೂ ಒಂದು ವಿಷಯದ ಕುರಿತು ಪ್ರಬಂಧ ಬರೆಯಬಹುದು. ಆಗಸ್ಟ್ 6 ರ ಭಾನುವಾರ ಶಿಡ್ಲಘಟ್ಟ ನಗರದ ಡಾಲ್ಫಿನ್ ಪಬ್ಲಿಕ್ ಶಾಲೆಯಲ್ಲಿ ಪ್ರಬಂಧ ಸ್ಪರ್ಧೆ ನಡೆಯಲಿದ್ದು ಈಗಾಗಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ತಾಲ್ಲೂಕಿನ ಎಲ್ಲ ಪ್ರೌಢಶಾಲೆಗಳಿಗೂ ಈ ಕುರಿತು ಸುತ್ತೋಲೆ ಹೊರಡಿಸಲಾಗಿದೆ.
ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲರಿಗೂ ಸಮಾಧಾನಕರ ಬಹುಮಾನ ಹಾಗೂ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆಯುವ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಅಭಿನಂದನಾ ಪತ್ರ, ನೆನಪಿನ ಕಾಣಿಕೆಯನ್ನು ನೀಡಿ ಆಗಸ್ಟ್ 14 ರ ಮಧ್ಯರಾತ್ರಿ ನಡೆಯುವ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಸತ್ಕರಿಸಲಾಗುವುದು ಎಂದು ತಿಳಿಸಿದ್ದಾರೆ.