ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಕುರಿತು ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ತಹಶೀಲ್ದಾರ್ ಕೆ.ಅರುಂಧತಿ ಮಾತನಾಡಿದರು.
ಕೋವಿಡ್ ಕಾರಣದಿಂದ ಸರಳವಾಗಿ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಅವರು ತಿಳಿಸಿದರು.
ಶಾಲಾ ಕಾಲೇಜಿನ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳಾಗಲೀ ಮಕ್ಕಳ ಭಾಗವಹಿಸುವಿಕೆಯಾಗಲೀ ಇರುವುದಿಲ್ಲ. ಕಡಿಮೆ ಸಂಖ್ಯೆಯಲ್ಲಿ ಗಣ್ಯರನ್ನು ಆಹ್ವಾನಿಸಲಾಗುವುದು. ಅಧಿಕಾರಿಗಳು ಮಾತ್ರ ಭಾಗಿಯಾಗುವರು. ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಪ್ರತಿಯೊಬ್ಬರನ್ನೂ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುವುದು.
ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಆರು ಮಕ್ಕಳನ್ನು ಸನ್ಮಾನಿಸಲಾಗುವುದು. ನಗರಸಭೆ, ಆರೋಗ್ಯ ಇಲಾಖೆ, ಸಿಡಿಪಿಒ ಇಲಾಖೆಗಳಿಂದ ಆಯ್ದ ಕೊರೊನಾ ವಾರಿಯರ್ಸ್ ಗಳನ್ನು ಸನ್ಮಾನಿಸಲಾಗುವುದು. ಕೊರೊನಾ ಸೋಂಕಿನಿಂದ ಗುಣಮುಖರಾದ ಕೆಲವರನ್ನು ಕರೆಸಿ ಅವರ ಅನುಭವಗಳನ್ನು ಹಂಚಿಕೊಳ್ಳಲು ಅವಕಾಶ ಮಾಡಿಕೊಡಲಾಗುವುದು ಎಂದರು.
ತಾಲ್ಲೂಕು ಪಂಚಾಯಿತಿ ಇಒ ಶಿವಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ದೈಹಿಕ ಶಿಕ್ಷಕ ರಂಗನಾಥ್ ಹಾಜರಿದ್ದರು.