Sidlaghatta : ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸಿದರೆ ಭಾರತವು ಜಗತ್ತಿನಲ್ಲೇ ಅತ್ಯುನ್ನತ ಸ್ಥಾನಕ್ಕೇರಲಿದೆ ಎಂದು ಶಾಸಕ ಬಿ.ಎನ್. ರವಿಕುಮಾರ್ ಹೇಳಿದರು. ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಮಂಗಳವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
In English: MLA B.N. Ravikumar said India would rise to the highest global standing if elected representatives and government officials functioned in line with the ideals of the Constitution, speaking at an International Day of Democracy event organised by the Social Welfare Department at the Sidlaghatta Taluk Office. Tehsildar Gagana Sindhu and other officials also spoke, stressing citizen participation and constitutional values.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾಜದ ಅಭಿವೃದ್ಧಿಗಾಗಿ ನಿಯಮಾನುಸಾರ ಕಾರ್ಯನಿರ್ವಹಿಸುವುದು ಅಗತ್ಯ. ತಾಲೂಕು ಮಟ್ಟದ ಅಧಿಕಾರಿಗಳು ಸರ್ಕಾರದ ಮಾರ್ಗಸೂಚಿಗಳನ್ನು ಸಮರ್ಪಕವಾಗಿ ಪಾಲಿಸಬೇಕು ಎಂದರು. ವಿದ್ಯಾರ್ಥಿಗಳು ಹಾಗೂ ಯುವಜನರು ಇಂತಹ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ತಹಶೀಲ್ದಾರ್ ಗಗನ ಸಿಂಧು ಮಾತನಾಡಿ, ಪ್ರಜಾಪ್ರಭುತ್ವವೆಂದರೆ ಕೇವಲ ಚುನಾವಣೆ ನಡೆಸುವುದಲ್ಲ. ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ, ಪ್ರಶ್ನಿಸುವ ಹಕ್ಕು, ಅಭಿಪ್ರಾಯ ಸ್ವಾತಂತ್ರ್ಯ ಹಾಗೂ ಸಂವಿಧಾನದ ಆಶಯಗಳಿಗೆ ಗೌರವ ನೀಡುವುದೂ ಅದರ ಪ್ರಮುಖ ಅಂಗಗಳಾಗಿವೆ. ಈ ಮೌಲ್ಯಗಳ ಬಗ್ಗೆ ಯುವಜನರಲ್ಲಿ ಅರಿವು ಮೂಡಿಸುವುದು ಕಾರ್ಯಕ್ರಮದ ಉದ್ದೇಶ ಎಂದರು. ಮುಖ್ಯ ಭಾಷಣಕಾರ ಡಾ. ಮೂರ್ತಿ ಸಾಮ್ರಾಟ್ ಮಾತನಾಡಿ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಮುಂದಿನ ಪೀಳಿಗೆಯನ್ನು ಪ್ರಜಾಪ್ರಭುತ್ವದ ಮೌಲ್ಯಗಳ ಆಧಾರದ ಮೇಲೆ ಸಶಕ್ತಗೊಳಿಸಲು ತತ್ವ–ಮೌಲ್ಯಗಳ ಕುರಿತು ಅರಿವು ಮೂಡಿಸುವುದು ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಇಒ ಹೇಮಾವತಿ, ಪೌರಾಯುಕ್ತೆ ಅಮೃತ, ಸಮಾಜ ಕಲ್ಯಾಣ ಇಲಾಖೆಯ ಜಗದೀಶ್, ವಕೀಲರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ವೆಂಕಟೇಶ್ ಮೂರ್ತಿ, ಪಿ.ಎಸ್.ಐ ಸುನಿಲ್ ಕುಮಾರ್, ಮೇಲೂರು ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಳೆದ ವರ್ಷ ಇದೇ ಸಂದರ್ಭದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗಿತ್ತು.

