
Sidlaghatta : ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಅವರ 75ನೇ ಹುಟ್ಟುಹಬ್ಬದ ಅಂಗವಾಗಿ ಲಿಯೋ ಕ್ಲಬ್ ಆಫ್ ಮಾರ್ಗ ಮತ್ತು ಅನಿತಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಕ್ಟೋಬರ್ 6ರಂದು ಬೃಹತ್ ಅಮೃತ ಮಹೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಪ್ರಿಯ ನಟ ಪವನ್ ಕಲ್ಯಾಣ್ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ ಎಂದು ಲಿಯೋ ಕ್ಲಬ್ ಆಫ್ ಕಿರಣ ಅಧ್ಯಕ್ಷ ಶ್ರೀಕಾಂತ್ ತಿಳಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಕಾರ್ಯಕ್ರಮದ ಭಿತ್ತಿಪತ್ರ ಬಿಡುಗಡೆ ಮಾಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಚಿಂತಾಮಣಿ ತಾಲ್ಲೂಕಿನ ಪೆದ್ದೂರಿನ ಗೋಪಾಲಗೌಡ ಅವರು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ, ಓಡಿಶಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದಾರೆ. ಜನಪರ ಹಾಗೂ ನೀರಾವರಿ ಹೋರಾಟಗಳಲ್ಲಿ ಸಕ್ರಿಯ ಪಾತ್ರವಹಿಸಿರುವ ಅವರ 75ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಮಾಜಮುಖಿ ಕಾರ್ಯಕ್ರಮಗಳೂ ಹಮ್ಮಿಕೊಳ್ಳಲಾಗಿದೆ” ಎಂದರು.
ಅಮೃತ ಮಹೋತ್ಸವ ಕಾರ್ಯಕ್ರಮ ಚಿಂತಾಮಣಿ ನಗರದ ಹೊರವಲಯದ ಚಿನ್ನಸಂದ್ರ ಗ್ರಾಮದ ಬಳಿ ನಡೆಯಲಿದ್ದು, ಕೇಂದ್ರ ಸಚಿವರು ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದ್ದು, ಭಾಗವಹಿಸುವವರು ಕಡ್ಡಾಯವಾಗಿ ಪಾಸ್ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಲಿಯೋ ಕ್ಲಬ್ ಪ್ರಧಾನ ಕಾರ್ಯದರ್ಶಿ ಲಿಯೋ ಲೋಕೇಶ್, ಅಖಿಲ ಕರ್ನಾಟಕ ಚಿರಂಜೀವಿ ಯುವತ ಅಧ್ಯಕ್ಷ ನಾರಾಯಣಸ್ವಾಮಿ ಕೆ, ಪವನ್ ಕಲ್ಯಾಣ್ ಅಭಿಮಾನಿ ಸಂಘದ ಜಿಲ್ಲಾಧ್ಯಕ್ಷ ಬುಜ್ಜಿ ನಾಯಕ್, ದಲಿತ ಮುಖಂಡ ಗೋರ್ಲಪ್ಪ, ಕಸ್ತೂರಿ ಕನ್ನಡ ಪರ ಸಂಘಟನೆಯ ರಾಮಾಂಜಿ, ಸುವರ್ಣ ಕರ್ನಾಟಕ ಜನಶಕ್ತಿ ನಗರಾಧ್ಯಕ್ಷ ಮಧುಸೂಧನ್, ವರದರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.