Kothanur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಜಿಕೆವಿಕೆ ಕೃಷಿ ವಿಜ್ಞಾನ ಪದವಿ ವಿದ್ಯಾರ್ಥಿಗಳ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿ ಭಾನುವಾರ “ಗ್ರಾಮೀಣ ಆರೋಗ್ಯ ಜಾಗೃತಿ ಕಾರ್ಯಕ್ರಮ” ಆಯೋಜಿಸಲಾಯಿತು. ಈ ಕಾರ್ಯಕ್ರಮವನ್ನು ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೊತ್ತನೂರು ಗ್ರಾಮ ಪಂಚಾಯಿತಿ ಪಿಡಿಒ ಪವಿತ್ರ ಅವರು, “ಗ್ರಾಮೀಣ ಭಾಗದವರು ತಮ್ಮ ದೈನಂದಿನ ಕೆಲಸಗಳಲ್ಲಿ ತೊಡಗಿಸಿಕೊಂಡು ಆರೋಗ್ಯದ ಕಡೆ ಹೆಚ್ಚಿನ ಗಮನಕೊಡುವುದಿಲ್ಲ. ವಿಶೇಷವಾಗಿ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಮುಚ್ಚಿಟ್ಟುಕೊಳ್ಳುವುದರಿಂದ ಭವಿಷ್ಯದಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಆದ್ದರಿಂದ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯುವುದು ಅಗತ್ಯ,” ಎಂದು ಹೇಳಿದರು.
ಅವರು ಮುಂದುವರೆದು, ಸರ್ಕಾರವು ಆರೋಗ್ಯ ಮಟ್ಟ ಸುಧಾರಣೆಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿರುವುದರಿಂದ ಗ್ರಾಮೀಣರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಬಿರದಲ್ಲಿ 150 ಕ್ಕೂ ಹೆಚ್ಚು ಮಂದಿಗೆ ರಕ್ತದೊತ್ತಡ, ಮಧುಮೇಹ ಹಾಗೂ ಇತರ ಆರೋಗ್ಯ ತಪಾಸಣೆ ನಡೆಸಿ ಔಷಧಿ ವಿತರಿಸಲಾಯಿತು. ಜೊತೆಗೆ ಸಮತೋಲನ ಆಹಾರದ ಮಹತ್ವ ಹಾಗೂ ಆರೋಗ್ಯ ಕಾಪಾಡಿಕೊಳ್ಳುವ ಮಾರ್ಗಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಕೆವಿಕೆಯ ಡಾ. ಗಣೇಶ್, ಡಾ. ಸವಿತಾ, ಡಾ. ವಿಜಯಲಕ್ಷ್ಮಿ, ವೈ. ಹುಣಸೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡಾ. ನಳಿನ, ಡಾ. ರಾಜೇಶ್ವರಿ, ಡಾ. ವಾಣಿ, ಡಾ. ನವಾಜ್ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.