Sidlaghatta : ಸರ್ ಎಂ. ವಿಶ್ವೇಶ್ವರಯ್ಯ ಅವರ ಜೀವನ, ಸಾಧನೆ, ಪರಿಶ್ರಮ ಮತ್ತು ದೂರದೃಷ್ಟಿಯನ್ನು ವಿದ್ಯಾರ್ಥಿಗಳು ಆದರ್ಶವಾಗಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ನಾರಾಯಣಸ್ವಾಮಿ ಹೇಳಿದರು.
In English: Kannada Sahitya Parishat (KSAP) taluk unit president Narayanaswamy urged students to make Sir M. Visvesvaraya’s life, achievements and vision their ideal, speaking at a Visvesvaraya Jayanti programme held under the "Sahitya Parishattina Nade Shalegala Kade" school-outreach campaign at Sharada Vidyasamsthe’s A.R.M. PU College near the KSRTC bus stand in Sidlaghatta. Essay and elocution competitions on Visvesvaraya’s life were held, with prizes for the winners.

ಕನ್ನಡ ಸಾಹಿತ್ಯ ಪರಿಷತ್ತು ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಸುವ ಕಾರ್ಯಕ್ರಮಗಳನ್ನು ನಡೆಸುತ್ತಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ತಿಳಿಸಿದರು. ಮಾಜಿ ಕಸಾಪ ಅಧ್ಯಕ್ಷ ಎಸ್.ವಿ. ನಾಗರಾಜರಾವ್ ಮಾತನಾಡಿ, ವಿಶ್ವೇಶ್ವರಯ್ಯ ಅವರ ತಾಂತ್ರಿಕ ಜ್ಞಾನ, ಸೂಕ್ಷ್ಮಗ್ರಹಣ ಶಕ್ತಿ ಮತ್ತು ದೂರದೃಷ್ಟಿಗೆ ಸಂಬಂಧಿಸಿದ ಘಟನೆಗಳನ್ನು ವಿವರಿಸಿದರು. ನೀರಾವರಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಅವರ ಅಭಿವೃದ್ಧಿ ಕಾರ್ಯಗಳು ಸಾಮರ್ಥ್ಯಕ್ಕೆ ಸಾಕ್ಷಿಯಾಗಿವೆ ಎಂದರು.
ಪ್ರಾಂಶುಪಾಲ ಡಾ. ಕೆ. ಮೂರ್ತಿ ಸಾಮ್ರಾಟ್ ಮಾತನಾಡಿ, ಸೆಪ್ಟೆಂಬರ್ 15ರಂದು ವಿಶ್ವೇಶ್ವರಯ್ಯ ಅವರ ಜನ್ಮದಿನದೊಂದಿಗೆ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನೂ ಆಚರಿಸಲಾಗುತ್ತದೆ. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗುತ್ತವೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಮತ್ತು ಮತದಾನದ ಅವಕಾಶವಿದೆ. ವಿದ್ಯಾರ್ಥಿಗಳು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತು ಜವಾಬ್ದಾರಿಯುತ ನಾಗರಿಕರಾಗಬೇಕು ಎಂದು ಹೇಳಿದರು. ಕರ್ನಾಟಕ ಸರ್ಕಾರದ ಯುವ ಸಂಸತ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಸಂಸತ್ತಿನ ಕಾರ್ಯವೈಖರಿ ಹಾಗೂ ಸಚಿವರು, ವಿರೋಧ ಪಕ್ಷದ ನಾಯಕರು ಮತ್ತು ಸಭಾಪತಿಗಳ ಜವಾಬ್ದಾರಿಗಳನ್ನು ತಿಳಿದುಕೊಳ್ಳಬಹುದು ಎಂದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ ಮಾತನಾಡಿ, ನೀರಾವರಿ ಮತ್ತು ಅಣೆಕಟ್ಟು ನಿರ್ಮಾಣ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ವಿಶ್ವೇಶ್ವರಯ್ಯ ಅವರ ಸೇವೆ ಸ್ಮರಣೀಯ ಎಂದರು. ವಿದ್ಯಾರ್ಥಿಗಳು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ದೇಶಕ್ಕೆ ಕೊಡುಗೆ ನೀಡಬೇಕು. ಹೆಣ್ಣು ಮತ್ತು ಗಂಡು ಮಕ್ಕಳಿಗೆ ಸಮಾನ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಕಾರ್ಯಕ್ರಮದ ಅಂಗವಾಗಿ ವಿಶ್ವೇಶ್ವರಯ್ಯ ಅವರ ಜೀವನ ಮತ್ತು ಸಾಧನೆ ಕುರಿತು ಪ್ರಬಂಧ ಹಾಗೂ ಭಾಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಸ್ನೇಹ, ಪ್ರೀತಿ, ಶ್ರಾವಂತಿ, ಪ್ರಾರ್ಥನ, ನಿತೀನ್ ಹಾಗೂ ಭವಾನಿ ಅವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಶಾರದಾ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎ.ಎಂ. ಶ್ರೀಕಾಂತ್, ಜಿಲ್ಲಾ ಕಸಾಪ ಸಂಘಟನಾ ಕಾರ್ಯದರ್ಶಿ ಮುನಿನಾರಾಯಣಪ್ಪ, ಗೌರವಾಧ್ಯಕ್ಷ ಎನ್. ಸುಂದರ್, ಕೋಶಾಧ್ಯಕ್ಷ ಮಳಮಾಚನಹಳ್ಳಿ ಎಂ. ದೇವರಾಜ್, ಚಕೋರ ಸಾಹಿತ್ಯ ಅಕಾಡೆಮಿ ಸದಸ್ಯ ಈಧರೆ ಪ್ರಕಾಶ್, ಕಸಾಪ ಪದಾಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಇದ್ದರು.

