
Sidlaghatta : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಮಾರ್ಚ್ 14ರ ಶನಿವಾರದಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಂಡಿದ್ದು, ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ರಾಜಿ ಸಂಧಾನದ ಮೂಲಕ ಪ್ರಕರಣಗಳ ಶೀಘ್ರ ವಿಲೇವಾರಿ ಮಾಡಬೇಕು ಎಂಬುದು ನಮ್ಮ ಆಶಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ ತಿಳಿಸಿದರು.
ನಗರದ ನ್ಯಾಯಾಲಯದ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಕೌಟುಂಬಿಕ ವ್ಯಾಜ್ಯ, ಸಿವಿಲ್, ಹಣಕಾಸಿನ ವಿಚಾರ, ಬ್ಯಾಂಕ್ ನಲ್ಲಿ ಸಾಲ ಪಡೆದಿರುವ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದು. ನ್ಯಾಯಾಲಯದಲ್ಲಿ ರಾಜೀ ಮಾಡಿಕೊಂಡರೆ ಮಾನವ ಸಂಬಂಧ, ಮೌಲ್ಯಗಳು, ಶಾಂತಿ, ನೆಮ್ಮದಿಯ ವಾತಾವರಣ ಮೂಡಿ ಕಕ್ಷಿದಾರರ ಅಮೂಲ್ಯವಾದ ಸಮಯ ಮತ್ತು ಹಣ ಇದರಿಂದ ಉಳಿಯುತ್ತದೆ. ರಾಜಿಗೆ ಯೋಗ್ಯವಾದ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಮಾಡಿಕೊಳ್ಳಲು ಇಚ್ಛಿಸುವ ಕಕ್ಷಿದಾರರು ಸ್ವಯಂ ಪ್ರೇರಿತರಾಗಿ ತಮ್ಮ ವಕೀಲರ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ರಾಜಿ ಮಾಡಿಕೊಳ್ಳುವ ಮೂಲಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ.ಸಿ.ಎಸ್., ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎಸ್.ರಂಜಿತ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್, ಹಿರಿಯ ವಕೀಲ ಎಂ.ಪಾಪಿರೆಡ್ಡಿ ಹಾಜರಿದ್ದರು.