ಶಿಶು ಅಭಿವೃದ್ಧಿ ಇಲಾಖೆಯಿಂದ ನಗರದ ಸ್ತ್ರೀಶಕ್ತಿ ಭವನದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಯೂಷ್ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಪೋಷಣ್ ಮಾಸಾಚರಣೆಯ ಅರಿವು ಕಾರ್ಯಕ್ರಮ ಮತ್ತು ಪೌಷ್ಠಿಕ ಶಿಬಿರವನ್ನು ಉದ್ಘಾಟಿಸಿ ಮಹಿಳಾ ಮತ್ತು ಮಕ್ಕಳಾಭಿವೃದ್ದಿ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಮಾತನಾಡಿದರು.
ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳು ಪೌಷ್ಠಿಕ ಆಹಾರ ಸೇವಿಸಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ವ್ಯಾಪಕವಾಗಿ ಅರಿವು ಮತ್ತು ಜಾಗೃತಿ ಮೂಡಿಸಬೇಕು. ಈ ವರ್ಷ ಕೋವಿಡ್-19 ಮಾರ್ಗಸೂಚಿಗಳನ್ನು ಅಳವಡಿಸಿಕೊಂಡು ಪೋಷಣೆಯ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಈ ವರ್ಷದ ಪೋಷಣ್ ಮಾಸಾಚರಣೆಯನ್ನು ಯಶಸ್ವಿಗೊಳಿಸಿ ಪೌಷ್ಠಿಕ ಕರ್ನಾಟಕ ನಿರ್ಮಿಸಲು ದೃಢ ಸಂಕಲ್ಪ ಮಾಡಬೇಕೆಂದರು.
ಜಿಲ್ಲೆಯಾದ್ಯಂತ ಅಂಗನವಾಡಿ ಕಾರ್ಯಕರ್ತೆಯರಿಂದ ಪೌಷ್ಠಿಕಾಂಶದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಮನೆ ಬೇಟಿ ನೀಡಿ ಅರಿವು ಮೂಡಿಸುವುದು, ಮಕ್ಕಳ ಬೆಳವಣಿಗೆಯ ಕುರಿತು ಪರಿಶೀಲಿಸಿ ಎಲ್ಲಾ ಅಂಗನವಾಡಿಗಳಲ್ಲಿ ಪೌಷ್ಠಿಕ ಕೈತೋಟ ನಿರ್ಮಾಣ ಮಾಡಲು ಸಿದ್ಧತೆಯನ್ನು ನಡೆಸಲಾಗುತ್ತಿದೆ. ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕೆಂದು ಅಂಗನವಾಡಿ ಕಾರ್ಯಕರ್ತರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಅಯೂಷ್ ಇಲಾಖೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಮಾತ್ರೆಗಳನ್ನು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಎಸ್.ಸಿ ಪದ್ಮರಾಜು, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನೌತಾಜ್, ಪೋಷಣ್ ಅಭಿಯಾನ್ ಯೋಜನೆಯ ಜಿಲ್ಲಾ ಸಂಯೋಜಕ ವಿ.ಶರತ್‍ಬಾಬು, ಜಿಲ್ಲಾ ಸಂಯೋಜಕರು, ಮೇಲ್ವಿಚಾರಕಿಯರು, ಅಯೂಷ್ ಅಧಿಕಾರಿಗಳು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಹಾಜರಿದ್ದರು.