Sidlaghatta : ಪ್ರತಿಯೊಬ್ಬರೂ ಕಡ್ಡಾಯವಾಗಿ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ (Pradhan Mantri Jan Arogya Yojana) ನೋಂದಣಿ ಮಾಡಿಸಿಕೊಳ್ಳುವಂತೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ ಮತ್ತು ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಸಾರ್ವಜನಿಕ ಆರೋಗ್ಯ ಇಲಾಖೆ ಕಚೇರಿಯಲ್ಲಿ ಜಂಟಿಯಾಗಿ ಮಾಹಿತಿ ನೀಡಿದರು.
ಕೇಂದ್ರ ಸರ್ಕಾರವು ಜಾರಿ ಮಾಡಿರುವ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಹೆಸರು ನೋಂದಣಿಯ ಅಭಿಯಾನ ನಡೆಯುತ್ತಿದೆ. ತಾಲ್ಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ನಗರಸಭೆ ಆಶ್ರಯದಲ್ಲಿ ನೋಂದಣಿ ಕಾರ್ಯ ಬಿರುಸಿನಿಂದ ನಡೆಯುತ್ತಿದೆ.
ಬಿಪಿಎಲ್ ಕಾರ್ಡನ್ನು ಹೊಂದಿರುವ ಕುಟುಂಬ ಸೇರಿದಂತೆ ಎಲ್ಲರೂ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ಗ್ರಾಮ ಒನ್, ಮಾಹಿತಿ ಸಿಂಧು ಕೇಂದ್ರ, ಧರ್ಮಸ್ಥಳದ ಗ್ರಾಮಾಭಿವೃದ್ದಿ ಯೋನೆಯ ಕೇಂದ್ರಗಳಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಮೊಬೈಲ್ ನಂಬರ್ ಲಿಂಕ್ ಆಗಿರುವ ರೇಷನ್ ಕಾರ್ಡು, ಆಧಾರ್ ಕಾರ್ಡನ್ನು ತಂದು ನೋಂದಾಯಿಸಿಕೊಳ್ಳಬೇಕು. ನಂತರ ಕಾರ್ಡು ಅವರವರ ಮನೆಗೆ ತಲುಪಿಸುವ ಕೆಲಸ ಸರ್ಕಾರವು ಮಾಡಲಿದೆ ಎಂದು ಹೇಳಿದರು.
ಈ ಯೋಜನೆಯಡಿ ಪ್ರತಿ ಕುಟುಂಬಕ್ಕೆ ನೋಂದಾಯಿತ ಆಸ್ಪತ್ರೆಗಳಲ್ಲಿ ವಾರ್ಷಿಕ 5 ಲಕ್ಷದವರೆಗೂ ವೈದ್ಯಕೀಯ ಚಿಕಿತ್ಸೆಯ ನೆರವು ಸಿಗಲಿದೆ ಎಂದು ವಿವರಿಸಿದರು.
ನಗರಸಭೆ ಪೌರಾಯುಕ್ತ ಆರ್.ಶ್ರೀಕಾಂತ್ ಮಾತನಾಡಿ, ಶಿಡ್ಲಘಟ್ಟ ನಗರದಲ್ಲಿ 53 ಸಾವಿರ ಮಂದಿಯ ನೋಂದಣಿ ಗುರಿಯಿದ್ದು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.