Sidlaghatta : ಸಾರ್ವಜನಿಕರು ಸಲ್ಲಿಸುವ ಅರ್ಜಿ, ಅಹವಾಲು ಹಾಗೂ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳು ಎಂಟು ದಿನಗಳೊಳಗಾಗಿ ಇತ್ಯರ್ಥಪಡಿಸಬೇಕು. ಎಂಟು ದಿನಗಳಲ್ಲಿ ಪರಿಹರಿಸಲು ಸಾಧ್ಯವಾಗದ ಪ್ರಕರಣಗಳನ್ನು ಗರಿಷ್ಠ 30 ದಿನಗಳೊಳಗಾಗಿ ಕಡ್ಡಾಯವಾಗಿ ಬಗೆಹರಿಸಬೇಕು ಎಂದು ಸರ್ಕಾರ ಸೂಚಿಸಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.
In English: MLA B.N. Ravikumar said officials must resolve public applications within 8 days — 30 at most — speaking at the taluk-level Prajaseve Andolana event at Bashettihalli’s K.P.S. school, where he flagged daily drinking-water shortages in 2-4 villages across the constituency and announced tricycles for persons with disabilities from his MLA fund.
ತಾಲ್ಲೂಕಿನ ಬಶೆಟ್ಟಿಹಳ್ಳಿಯ ಕೆಪಿಎಸ್ ಶಾಲೆಯಲ್ಲಿ ಶನಿವಾರ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ “ಪ್ರಜಾಸೇವೆ (ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ)” ಆಂದೋಲನದ ತಾಲ್ಲೂಕು ಮಟ್ಟದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಂದಾಯ ಇಲಾಖೆ, ಗ್ರಾಮೀಣ ಭಾಗದ ರೈತರು ಹಾಗೂ ನಕಾಶೆ ರಸ್ತೆ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಹಲವು ದೂರುಗಳು ಬರುತ್ತಿವೆ. ಅಧಿಕಾರಿಗಳು ಜನರ ಸಮಸ್ಯೆಗಳನ್ನು ವಿಳಂಬ ಮಾಡದೆ ಸ್ಥಳೀಯವಾಗಿಯೇ ಪರಿಶೀಲಿಸಿ ಪರಿಹಾರ ಕಲ್ಪಿಸಬೇಕು ಎಂದು ಹೇಳಿದರು.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿದಿನ ಎರಡರಿಂದ ನಾಲ್ಕು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರುವುದು ಗಮನಕ್ಕೆ ಬಂದಿದೆ. ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಗ್ರಾಮಗಳಿಗೆ ಖುದ್ದು ಭೇಟಿ ನೀಡಿ ನೀರಿನ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗಮನಕ್ಕೆ ತರಬೇಕು ಎಂದರು.
ಕುಡಿಯುವ ನೀರು ಮೊದಲ ಆದ್ಯತೆ:
ಕುಡಿಯುವ ನೀರು ಒದಗಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಕಂಡುಬಂದ ಕೂಡಲೇ ಪಿಡಿಒ ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು (ಇಒ) ಮೇಲಧಿಕಾರಿಗಳ ಗಮನಕ್ಕೆ ತಂದು ತ್ವರಿತವಾಗಿ ಪರಿಹಾರ ಕಂಡುಕೊಳ್ಳಬೇಕು. ಈ ಕುರಿತು ಜಿಲ್ಲಾ ಮಟ್ಟದಲ್ಲಿಯೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ತಿಳಿಸಿದರು.
ಸಾರ್ವಜನಿಕರು ತಮ್ಮ ಕೆಲಸ-ಕಾರ್ಯಗಳಿಗಾಗಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ನೇರವಾಗಿ ಸಂಪರ್ಕಿಸಿ ಅಹವಾಲು ಸಲ್ಲಿಸಲು ಪ್ರಜಾಸೇವಾ ಆಂದೋಲನ ಉತ್ತಮ ಅವಕಾಶವಾಗಿದೆ. ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿ ಗ್ರಾಮೀಣ ಭಾಗದ ರೈತರು ಹಾಗೂ ಬಡವರಿಗೆ ಅನುಕೂಲವಾಗುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಜನರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ವಿಶೇಷಚೇತನರಿಗೆ ತ್ರಿಚಕ್ರ ವಾಹನ ವಿತರಣೆ:
2025–26ನೇ ಸಾಲಿನ ಶಾಸಕರ ವಾರ್ಷಿಕ ₹2 ಕೋಟಿ ಅನುದಾನದಲ್ಲಿ ಶೇ 10ರಷ್ಟು, ಅಂದರೆ ಸುಮಾರು ₹20 ಲಕ್ಷವನ್ನು ವಿಶೇಷಚೇತನರಿಗೆ ನೆರವು ನೀಡಲು ಮೀಸಲಿಡಲಾಗಿದೆ. ಈ ಅನುದಾನದಡಿ ವಿಶೇಷಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.
ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿದಂತೆ ಹಲವು ಪಿಂಚಣಿ ಯೋಜನೆಗಳ ಮಂಜೂರಾತಿ ಆದೇಶ ಪತ್ರಗಳನ್ನು ಕೆಲವರಿಗೆ ಸಾಂಕೇತಿಕವಾಗಿ ವಿತರಿಸಲಾಯಿತು.
ಆರೋಗ್ಯ ಇಲಾಖೆಯಿಂದ ವಿವಿಧ ರೀತಿಯ ಸೊಪ್ಪು, ತರಕಾರಿ, ಹಣ್ಣು ಹಂಪಲುಗಳು ಸೇರಿದಂತೆ ಪೌಷ್ಟಿಕ ಆಹಾರ ಪದಾರ್ಥಗಳ ಪ್ರದರ್ಶನ ಏರ್ಪಡಿಸಲಾಗಿತ್ತಲ್ಲದೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಬಿಪಿ, ಶುಗರ್ ತಪಾಸಣೆಯ ಶಿಬಿರವೂ ನಡೆಯಿತು.
ತಹಶೀಲ್ದಾರ್ ಎನ್.ಗಗನಸಿಂಧು, ಇಒ ಆರ್.ಹೇಮಾವತಿ, ಸರ್ಕಲ್ ಇನ್ಸ್ಪೆಕ್ಟರ್ ಆನಂದ್ ಕುಮಾರ್, ಕೃಷಿ ಇಲಾಖೆಯ ರವಿ, ರೇಷ್ಮೆ ಇಲಾಖೆಯ ಅಕ್ಮಲ್ ಪಾಷ, ಸಿಡಿಪಿಒ ವಿದ್ಯಾ ವಸ್ತ್ರದ್ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು, ಕಾವೇರಿ ಹ್ಯಾಂಡ್ ಲೂಮ್ಸ್ ಅಧ್ಯಕ್ಷ ಜೈ ಗಣೇಶ್, ಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

