Sidlaghatta : ಆಡಳಿತ ವ್ಯವಸ್ಥೆ ಮತ್ತು ಸಾರ್ವಜನಿಕರ ನಡುವಿನ ಅಂತರ ಕಡಿಮೆ ಮಾಡುವ ಉದ್ದೇಶದಿಂದ ತಾಲ್ಲೂಕಿನಾದ್ಯಂತ “ಪ್ರಜಾಸೇವೆ ಆಂದೋಲನ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
In English: Sidlaghatta taluk is launching a “Prajaseve Andolana” outreach programme where officials will travel directly to villages to hear public grievances, Tahsildar Gaganasindhu announced. Weekly hobli- and taluk-level meetings begin September 5 at a school in Sadali hobli, with the taluk-level sessions chaired by the district in-charge minister and local MLA.
ಸಾರ್ವಜನಿಕರು ಹಾಗೂ ರೈತರು ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಹಶೀಲ್ದಾರ್ ಗಗನ ಸಿಂಧು ಮನವಿ ಮಾಡಿದರು. ತಹಶೀಲ್ದಾರ್ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಂದೋಲನದಡಿ ಅಧಿಕಾರಿಗಳೇ ನೇರವಾಗಿ ಜನರ ಬಳಿಗೆ ತೆರಳಿ ಕುಂದುಕೊರತೆಗಳನ್ನು ಆಲಿಸಲಿದ್ದಾರೆ ಎಂದು ತಿಳಿಸಿದರು.
ಪ್ರತಿ ಶನಿವಾರ ಹೋಬಳಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಜನಸ್ಪಂದನ ಸಭೆಗಳನ್ನು ನಡೆಸಲಾಗುವುದು. ತಾಲ್ಲೂಕು ಮಟ್ಟದ ಕಾರ್ಯಕ್ರಮಗಳು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯಲಿವೆ ಎಂದು ಹೇಳಿದರು.
ಆಂದೋಲನದ ಮೊದಲ ಸಭೆ ಸೆ.5ರಂದು ಸಾದಲಿ ಹೋಬಳಿಯ ಕೆ.ಪಿ.ಎಸ್. ಶಾಲೆಯಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದೆ. ಬಳಿಕ ಬಶೆಟ್ಟಿಹಳ್ಳಿ ಕಸಬ ಹೋಬಳಿ ಹಾಗೂ ಜಂಗಮಕೋಟೆ ಹೋಬಳಿಗಳಲ್ಲಿ ಅನುಕ್ರಮವಾಗಿ ಸಭೆಗಳನ್ನು ಆಯೋಜಿಸಲಾಗುವುದು ಎಂದರು.
ತಾಲ್ಲೂಕು ಮಟ್ಟದ ಎಲ್ಲ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಕಡ್ಡಾಯವಾಗಿ ಭಾಗವಹಿಸಲಿದ್ದು, ಇಲಾಖೆಗಳ ಸಾಧನೆಗಳು ಹಾಗೂ ಸಾರ್ವಜನಿಕರಿಗೆ ಲಭ್ಯವಿರುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಲಿಖಿತ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸ್ಥಳದಲ್ಲಿಯೇ ಪರಿಹರಿಸಲು ಸಾಧ್ಯವಿರುವ ಸಮಸ್ಯೆಗಳಿಗೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು. ಉಳಿದ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗೆ ವರ್ಗಾಯಿಸಿ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗುವುದು. ಅರ್ಜಿಗಳ ಪ್ರಗತಿಯನ್ನು ಪ್ರತಿ ಬುಧವಾರ ಪರಿಶೀಲಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.
ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಿ, ತಾಲ್ಲೂಕು ಆಡಳಿತವೇ ಜನರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸುವ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.

