ಸರ್ಕಾರಿ ಶಾಲೆ ನಿರ್ಲಕ್ಷ್ಯ ಏಕೆ? ಪ್ರತಿಭಾ ಕಾರಂಜಿಯಲ್ಲಿ 12 ಸ್ಪರ್ಧೆ; ಪೋಷಕರಿಗೆ ಶಿಕ್ಷಣಾಧಿಕಾರಿ ಮನವಿ

Girls in red sarees performing a folk dance with green leaf bunches in front of a crowd of students and villagers at the cluster-level Pratibha Karanji

Sidlaghatta : ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಉತ್ತಮ ವೇದಿಕೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ಸ್ವಾಮಿ ಹೇಳಿದರು. ತಾಲ್ಲೂಕಿನ ಚಿಕ್ಕದಾಸರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ತುಮ್ಮನಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರಿ ಶಾಲೆ ಬಗ್ಗೆ ಪೋಷಕರಿಗೆ ಮನವಿ

ಪ್ರತಿಯೊಬ್ಬರಲ್ಲೂ ಒಂದು ವಿಶಿಷ್ಟ ಪ್ರತಿಭೆ ಅಡಗಿರುತ್ತದೆ; ಅದನ್ನು ಗುರುತಿಸಿ ಬೆಳೆಸುವುದು ಶಿಕ್ಷಕರು, ಪೋಷಕರು ಹಾಗೂ ಸಮಾಜದ ಜವಾಬ್ದಾರಿ ಎಂದ ಅವರು, ಪ್ರತಿಭಾ ಕಾರಂಜಿಯ ಮೂಲಕ ಮಕ್ಕಳಲ್ಲಿನ ಕಲೆ, ಸಾಹಿತ್ಯ, ಸಂಗೀತ ಸೇರಿದಂತೆ ವಿವಿಧ ಕ್ಷೇತ್ರಗಳ ಆಸಕ್ತಿಯನ್ನು ಗುರುತಿಸಲು ಸಾಧ್ಯ ಎಂದು ತಿಳಿಸಿದರು.

ಸರ್ಕಾರದ ವಿವಿಧ ಯೋಜನೆಗಳ ಪ್ರಯೋಜನ ಪಡೆಯಲು ಆಸಕ್ತಿ ತೋರುವ ಗ್ರಾಮೀಣ ಭಾಗದ ಜನರು ಸರ್ಕಾರಿ ಶಾಲೆಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುತ್ತಿರುವುದು ವಿಷಾದನೀಯ ಎಂದು ಅವರು ಹೇಳಿದರು. ಸರ್ಕಾರಿ ಶಾಲೆಗಳಲ್ಲಿಯೂ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದ್ದು, ನುರಿತ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸ ಇಟ್ಟು ಮಕ್ಕಳನ್ನು ದಾಖಲಿಸಬೇಕು ಎಂದು ಮನವಿ ಮಾಡಿದರು.

ಸಹಪಠ್ಯ ಚಟುವಟಿಕೆ ಏಕೆ ಮುಖ್ಯ?

ಮುಖ್ಯ ಶಿಕ್ಷಕಿ ಸರಸ್ವತಮ್ಮ ಮಾತನಾಡಿ, ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಠ್ಯ ಶಿಕ್ಷಣದ ಜತೆಗೆ ಸಹಪಠ್ಯ ಚಟುವಟಿಕೆಗಳೂ ಮುಖ್ಯ; ಇಂತಹ ಕಾರ್ಯಕ್ರಮಗಳು ಮಕ್ಕಳ ಸೃಜನಶೀಲತೆ, ಕಲಾಸಕ್ತಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದರು. ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡಿರುವುದು ಸಂತಸದ ಸಂಗತಿ ಎಂದು ಹೇಳಿದರು.

12 ಸ್ಪರ್ಧೆ, ಬಹುಮಾನ ವಿತರಣೆ

ಮಣ್ಣಿನ ಕಲೆ, ಚಿತ್ರಕಲೆ, ಪ್ರಬಂಧ, ಭಕ್ತಿಗೀತೆ, ಭಾವಗೀತೆ, ಕಂಠಪಾಠ ಸೇರಿದಂತೆ ಒಟ್ಟು 12 ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಕ್ಲಸ್ಟರ್ ವ್ಯಾಪ್ತಿಯ ವಿವಿಧ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಂಡು ಪ್ರತಿಭೆ ಪ್ರದರ್ಶಿಸಿದರು. ಪ್ರಥಮ ಮತ್ತು ದ್ವಿತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಂಸನಾ ಪತ್ರ ನೀಡಲಾಯಿತು.

ಶಾಲೆಯ ಎಸ್‌.ಡಿ.ಎಂ.ಸಿ ಅಧ್ಯಕ್ಷ ಗೌತಮ್, ಸಿ.ಆರ್‌.ಪಿ ಬಾಬು, ತುಮ್ಮನಹಳ್ಳಿ ಕ್ಲಸ್ಟರ್ ವ್ಯಾಪ್ತಿಯ ಶಿಕ್ಷಕ-ಶಿಕ್ಷಕಿಯರು, ಬಿಆರ್‌ಸಿ ಅಧಿಕಾರಿಗಳು, ಶಾಲಾ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

ಸಂಬಂಧಿತ ಸುದ್ದಿ: ನೂರಾರು ಮಕ್ಕಳ ಪ್ರತಿಭೆ ಅನಾವರಣ: ಪ್ರತಿಭಾ ಕಾರಂಜಿಯಲ್ಲಿ ಜಾನಪದ ನೃತ್ಯ, ಚಿತ್ರಕಲೆ, ನಾಟಕ ಸ್ಪರ್ಧೆ | ಚಿಣ್ಣರ ಚಿತ್ರಕಲಾ ಉತ್ಸವ–2026: ಪ್ರಥಮ ₹1,500 ಬಹುಮಾನ; ತಾಲ್ಲೂಕು ಮಟ್ಟಕ್ಕೆ ಇಬ್ಬರು ಆಯ್ಕೆ

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

Nearby

ಇದನ್ನೂ ಓದಿ

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.