Sidlaghatta : ರಾಜ್ಯಾದ್ಯಂತ ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ನಡೆಸಿರುವ ಕಾಮಗಾರಿಗಳ 25 ಸಾವಿರ ಕೋಟಿ ರೂ ಹಣ ಬಾಕಿ ಇದ್ದು ಗುತ್ತಿಗೆದಾರರು ಸಂಕಷ್ಟದಲ್ಲಿ ಜೀವನ ನಡೆಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಪ್ರವಾಸಿಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜಿಲ್ಲಾ ಗುತ್ತಿಗೆದಾರರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆಸಿರುವ ಅಭಿವೃದ್ಧಿ ಕಾಮಗಾರಿಗಳ ಹಣ ಕಳೆದ ಮೂರು ವರ್ಷಗಳಿಂದ ಗುತ್ತಿಗೆದಾರರಿಗೆ ಪಾವತಿ ಆಗಿಲ್ಲ. ಇದರಿಂದಾಗಿ ಗುತ್ತಿಗೆದಾರರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಲು ಆಗದ ಸಂಕಷ್ಟವನ್ನು ಎದುರಿಸುವಂತಾಗಿದೆ. ಇದೀಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದು ಮೂರು ತಿಂಗಳಾಗಿದ್ದು ಇವರು ಸಹ ಹಣ ಪಾವತಿ ಮಾಡಲು ವಿಳಂಬ ಮಾಡುತ್ತಿದ್ದಾರೆ. ಕೂಡಲೇ ಗುತ್ತಿಗೆದಾರರ ಬಾಕಿ ಹಣವನ್ನು ಪಾವತಿಸಬೇಕೆಂದು ಒತ್ತಾಯಿಸಿದರು.
ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಸಹಿತ ಅನೇಕ ಸಚಿವರನ್ನು ಭೇಟಿ ಮಾಡಿ ಗುತ್ತಿಗೆದಾರರ ಬಾಕಿ ಹಣವನ್ನು ಪಾವತಿಸಬೇಕು ಎಂದು ಮನವಿ ಮಾಡಿದ್ದೇವೆ. ಎಲ್ಲರೂ ಸಹ ಸಕಾರಾತ್ಮಕವಾಗಿ ಸ್ಪಂದಿಸಿ ಹಂತ ಹಂತವಾಗಿ ಹಣವನ್ನು ಪಾವತಿಸುವ ಭರವಸೆ ನೀಡಿದ್ದಾರೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಗುತ್ತಿಗೆದಾರರ ಸಂಘಕ್ಕೆ ಒಂದು ಸುಸ್ವಜಿತ ಕಟ್ಟಡವನ್ನು ನಿರ್ಮಾಣ ಮಾಡಲು ಐದು ಎಕರೆ ಜಮೀನು ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದೇವೆ. ಅದೇ ರೀತಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಸೂಕ್ತ ಜಾಗ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರದ ಕುರಿತು ಕೇವಲ ಆರೋಪಗಳು ಮಾತ್ರ ಮಾಡಲಿಲ್ಲ ಬದಲಿಗೆ ಅದಕ್ಕೆ ಪೂರಕವಾಗಿರುವ ದಾಖಲೆಗಳನ್ನು ಪ್ರಧಾನಮಂತ್ರಿ ಕಚೇರಿ, ಸೇರಿದಂತೆ ಮುಖ್ಯಮಂತ್ರಿಗಳ ಕಚೇರಿ ಹಾಗೂ ರಾಜ್ಯಪಾಲರಿಗೆ ಸಲ್ಲಿಸಲಾಗಿತ್ತು. ಈ ಪೈಕಿ ಕೇವಲ ರಾಜ್ಯಪಾಲರು ಮಾತ್ರ ಸಂಬಂಧಿಸಿದ ಇಲಾಖೆಗಳಿಗೆ ಸೂಕ್ತ ಕ್ರಮ ಜರುಗಿಸಬೇಕೆಂದು ಸೂಚನೆ ನೀಡಿದ್ದಾರೆಯೇ ಹೊರತು ಬೇರಾರು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರದಲ್ಲಿ ಶೇ 40 ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂಬ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಿದೆ ಅಥವ ಸರ್ಕಾರ ಪತನವಾಗಿದೆ ಎನ್ನುವುದು ಸರಿಯಲ್ಲ. ಇದು ನಮ್ಮ ಹೋರಾಟದಿಂದ ಆಗಿದೆ ಎನ್ನುವ ಕ್ರೆಡಿಟ್ ಪಡೆಯುವ ಅಗತ್ಯವೂ ನಮಗಿಲ್ಲ. ನಾವು ಯಾವುದೇ ಒಂದು ಪಕ್ಷದ ಪರ ಅಥವ ವಿರೋಧ ಇಲ್ಲ, ಆಡಳಿತ ವ್ಯವಸ್ಥೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಮಾತ್ರ ಪ್ರಶ್ನಿಸಿದ್ದೇವೆ. ಇದೀಗ ಆಡಳಿತ ನಡೆಸುತ್ತಿರುವ ಪಕ್ಷವೂ ಹಿಂದಿನ ಸರ್ಕಾರದ ರೀತಿಯೇ ನಡೆದುಕೊಂಡರೆ ಇವರ ವಿರುದ್ದವೂ ಹೋರಾಟದ ಹಾದಿ ಹಿಡಿಯಬೇಕಾಗುತ್ತದೆ ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ, ಪ್ರಧಾನ ಕಾರ್ಯದರ್ಶಿ ರವೀಂದ್ರ, ಸಂಘಟನಾ ಕಾರ್ಯದರ್ಶಿ ಜಗದೀಶ್ ಸೇಠ್‌ಜಿ, ಜಿಲ್ಲಾಧ್ಯಕ್ಷ ಎಚ್.ಮುನೇಗೌಡ, ನಿರ್ದೇಶಕರಾದ ಸುರೇಶ್, ಕೆ.ಬಿ.ಮಂಜುನಾಥ್ ಹಾಜರಿದ್ದರು.