News

ಶಾಸಕ ರವಿಕುಮಾರ್: 2028ರ ವಿಧಾನಸಭೆ ಚುನಾವಣೆಯಲ್ಲಿ NDA 140ಕ್ಕೂ ಹೆಚ್ಚು ಸ್ಥಾನ ಗೆಲುವು ವಿಶ್ವಾಸ

Ravikumar press meet, Sidlaghatta, NDA election claims

Sidlaghatta : 2028ರ ವಿಧಾನಸಭೆ ಚುನಾವಣೆಯಲ್ಲಿ ಎನ್‌.ಡಿ.ಎ 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ. ಎಚ್.ಡಿ. ಕುಮಾರಸ್ವಾಮಿ ಮೂರನೇ ಬಾರಿ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಶಾಸಕ ಬಿ.ಎನ್. ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕಿನ ಮೇಲೂರಿನ ತಮ್ಮ ಗೃಹ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣೆಯಲ್ಲಿ ಎನ್‌.ಡಿ.ಎ ಅಭ್ಯರ್ಥಿಗಳ ಗೆಲುವು ಮುಂಬರುವ ಚುನಾವಣೆಗಳಿಗೆ ಭದ್ರ ಬುನಾದಿ ಹಾಕಿದೆ. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮನ್ವಯದಿಂದ ಈ ಗೆಲುವು ಸಾಧ್ಯವಾಗಿದೆ. ಮುಂದಿನ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಎರಡೂ ಪಕ್ಷಗಳು ಒಗ್ಗಟ್ಟಿನಿಂದ ಕೆಲಸ ಮಾಡಲಿವೆ ಎಂದರು.

ಆಗ್ನೇಯ ಪದವೀಧರ ಕ್ಷೇತ್ರದ ಎನ್‌.ಡಿ.ಎ ಅಭ್ಯರ್ಥಿ ಕೆ.ಎಂ. ಸುರೇಶ್ ಅವರು ಸುಮಾರು 23 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕ್ಷೇತ್ರದ ಶಿಕ್ಷಕರು ಮತ್ತು ಪದವೀಧರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ರಾಜ್ಯ ಸರ್ಕಾರಕ್ಕೆ ಜನರು ನೀಡಿರುವ ಎಚ್ಚರಿಕೆಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವಿಚಾರದಲ್ಲಿ ಕಾಂಗ್ರೆಸ್ ಜನರನ್ನು ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆಗೆ ಅವಕಾಶವಿದ್ದರೂ, ಜನರಲ್ಲಿ ಗೊಂದಲ ಸೃಷ್ಟಿಸುವುದು ಸರಿಯಲ್ಲ. ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಟ್ಟಿದ್ದರೆ ನಿಯಮಾನುಸಾರ ಸರಿಪಡಿಸಿಕೊಳ್ಳಲು ಅವಕಾಶವಿದೆ ಎಂದರು.

ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ರೈತರ ಸಾಲಮನ್ನಾ, ಗ್ರಾಮ ವಾಸ್ತವ್ಯ, ಸಾರಾಯಿ ನಿಷೇಧ ಹಾಗೂ ಲಾಟರಿ ನಿಷೇಧದಂತಹ ಜನಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ. ರೈತರು, ಬಡವರು, ಯುವಕರು ಮತ್ತು ಮಹಿಳೆಯರ ಹಿತದೃಷ್ಟಿಯಿಂದ ರಾಜ್ಯದಲ್ಲಿ ಎನ್‌.ಡಿ.ಎ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ ಎಂದು ತಿಳಿಸಿದರು.

ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದ್ದು, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‌ ನ ಸಿ.ಎಸ್‌.ಆರ್ ಅನುದಾನದಡಿ 25 ಕುಡಿಯುವ ನೀರಿನ ಘಟಕಗಳಿಗೆ ಮಂಜೂರಾತಿ ದೊರೆತಿದೆ. ಶಿಕ್ಷಣ, ಆರೋಗ್ಯ, ರಸ್ತೆ, ಕುಡಿಯುವ ನೀರು ಹಾಗೂ ಒಳಚರಂಡಿ ಸೌಲಭ್ಯಗಳ ಅಭಿವೃದ್ಧಿಗೆ ಪ್ರಯತ್ನಿಸಲಾಗುತ್ತಿದೆ ಎಂದರು.

ಎಚ್.ಎನ್. ವ್ಯಾಲಿ ಮತ್ತು ಕೆ.ಸಿ. ವ್ಯಾಲಿ ಯೋಜನೆಗಳಡಿ ಕ್ಷೇತ್ರದ ಒಂಬತ್ತು ಕೆರೆಗಳಿಗೆ ನೀರು ಹರಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಶೆಟ್ಟಿಹಳ್ಳಿ ಮತ್ತು ಬಂಡೆಮ್ಮನ ಕೆರೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು. ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸುವುದಾಗಿ ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ಮುಖಂಡರಾದ ಬಂಕ್ ಮುನಿಯಪ್ಪ, ಹುಜುಗೂರು ರಾಮಣ್ಣ, ಮೇಲೂರು ಮಂಜುನಾಥ್, ಮುಗಿಲಡಿಪಿ ನಂಜಪ್ಪ, ತಾದೂರು ರಘು, ವಿಜಯೇಂದ್ರ, ಆರ್.ಎ.ಉಮೇಶ್, ನಂದಕಿಶನ್, ರಮೇಶ್, ಎಸ್.ಎನ್.ವೆಂಕಟೇಶ್ ಹಾಜರಿದ್ದರು.

ಸಂಬಂಧಿತ ಸುದ್ದಿ: ಪದವೀಧರ ಕ್ಷೇತ್ರದ ಗೆಲುವು: NDA ಸಂಭ್ರಮಾಚರಣೆ, ಮುಂದಿನ ಚುನಾವಣೆಗಳಲ್ಲಿ BJP–JDS ಮೈತ್ರಿ

Sidlaghatta WhatsApp Channel Group

For Daily Updates WhatsApp ‘HI’ to 7406303366

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Share
error: Content is protected !!