Home News ಸುಸಜ್ಜಿತ ಸಂಜೀವಿನಿ ಕಟ್ಟಡದ ಉದ್ಘಾಟನೆ

ಸುಸಜ್ಜಿತ ಸಂಜೀವಿನಿ ಕಟ್ಟಡದ ಉದ್ಘಾಟನೆ

0
Sidlaghatta Cheemangla Sanjivini Inauguration MLA V Muniyappa

Cheemangala, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮಸಭೆ ಹಾಗೂ NRLM (ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ) ತರಬೇತಿಗಳನ್ನು ನಡೆಸಲು ಅನುಕೂಲವಾಗುವಂತೆ ಸುಮಾರು 18 ಲಕ್ಷ ರೂ ವೆಚ್ಚದಲ್ಲಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಮೇಲಂತಸ್ತಿನಲ್ಲಿ ಸುಸಜ್ಜಿತ ಸಂಜೀವಿನಿ ಕಟ್ಟಡ (Sanjivini) ನಿರ್ಮಾಣ ಮಾಡಲಾಗಿದ್ದು ಪ್ರತಿಯೊಬ್ಬರೂ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಶಾಸಕ ವಿ.ಮುನಿಯಪ್ಪ (MLA V Muniyappa) ಹೇಳಿದರು.

ತಾಲ್ಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ 2021-22 ನೇ ಸಾಲಿನ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯಡಿ ನಿರ್ಮಾಣ ಮಾಡಲಾಗಿರುವ ಎನ್.ಆರ್.ಎಲ್.ಎಂ (ಸಂಜೀವಿನಿ) ಕಟ್ಟಡದ ಉದ್ಘಾಟನೆಯನ್ನು ಶನಿವಾರ ನೆರವೇರಿಸಿ ಅವರು ಮಾತನಾಡಿದರು.

ಉದ್ಯೋಗಖಾತ್ರಿ ಯೋಜನೆ ಜಾರಿಯಾಗುವ ಮುನ್ನ ಗ್ರಾಮ ಪಂಚಾಯಿತಿಗಳಲ್ಲಿ ಯಾವುದೇ ಮಹತ್ತರ ಕಾಮಗಾರಿಗಳಾಗುತ್ತಿರಲಿಲ್ಲ. ಆದರೆ ಯೋಜನೆ ಜಾರಿಗೆ ಬಂದ ಮೇಲೆ ಸುಸಜ್ಜಿತ ಪಂಚಾಯಿತಿ ಕಟ್ಟಡಗಳ ನಿರ್ಮಾಣ ಸೇರಿದಂತೆ ಗ್ರಾಮೀಣ ಬಾಗದ ಜನತೆಗೆ ಅಗತ್ಯವಿರುವ ಬಹುತೇಕ ಕಾಮಗಾರಿಗಳು ಮಾಡಿಸಲು ಸಾಧ್ಯವಾಗಿದೆ. ಹಾಗಾಗಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಜನಪ್ರತಿನಿಧಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪ್ರಮಾಣಿಕ ಪ್ರಯತ್ನ ನಡೆಸಬೇಕು ಎಂದರು.

ಉದ್ಯೋಗಖಾತ್ರಿ ಯೋಜನೆಯಡಿ ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಎಷ್ಟು ಅನುದಾನವಾದರೂ ಬಳಸಿಕೊಳ್ಳಬಹುದು. ಇಂತಹ ಯೋಜನೆಗಳ ದುರುಪಯೋಗವಾಗಬಾರದು. ಇದನ್ನು ಸದುಪಯೋಗ ಪಡಿಸಿಕೊಂಡಿದ್ದೇ ಆದಲ್ಲಿ ಮುಂದಿನ ಐದು ವರ್ಷಗಳಲ್ಲಿ ಗ್ರಾಮೀಣ ಭಾಗದ ಜನತೆಯ ಅಗತ್ಯ ನಾಗರಿಕ ಸವಲತ್ತುಗಳು ಪೂರೈಸಲು ಸಹಕಾರಿಯಾಗುತ್ತದೆ ಎಂದರು.

ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲ್‌ಕುಮಾರ್ ಮಾತನಾಡಿ, ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆಯ ಮೂಲಕ ಪ್ರತಿ ಗ್ರಾಮ ಪಂಚಾಯಿತಿಗಳಿಗೆ ಕೋಟ್ಯಾಂತರ ರೂಗಳ ಅನುದಾನ ಸಿಗುತ್ತಿದೆ. ಜೊತೆಗೆ ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳ ಅಭಿವೃದ್ದಿಯ ಜೊತೆಗೆ ವ್ಯವಸಾಯದಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲು ಅವಕಾಶಗಳಿದೆ. ಗ್ರಾಮ ಪಂಚಾಯಿತಿ ಸದಸ್ಯರೂ ಸೇರಿದಂತೆ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತರಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಚೀಮಂಗಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಎಂ.ರಾಜಪ್ಪ, ಉಪಾಧ್ಯಕ್ಷೆ ಸುಮಿತ್ರಾ ಮಂಜುನಾಥ್, ಮಾಜಿ ಶಾಸಕ ಎಂ.ರಾಜಣ್ಣ, ಜಿಲ್ಲಾ ಪಂಚಾಯಿತಿ ಸಿಇಓ ಪಿ.ಶಿವಶಂಕರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶಿವಕುಮಾರ್, ತಹಶೀಲ್ದಾರ್ ಬಿ.ಎಸ್.ರಾಜೀವ್, ತಾಲ್ಲೂಕು ಪಂಚಾಯಿತಿ ಇಓ ಜಿ.ಮುನಿರಾಜು, ನರೇಗಾ ಸಹಾಯಕ ನಿರ್ದೇಶಕ ಚಂದ್ರಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ಅಭಿವೃದ್ಧಿ ಅಧಿಕಾರಿ ಜೆ.ಎ.ತನ್ವೀರ್‌ ಅಹಮ್ಮದ್ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಸಿಬ್ಬಂದಿ ಹಾಜರಿದ್ದರು.

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version