Sidlaghatta : ಏರುತ್ತಿರುವ ರಸಗೊಬ್ಬರ ಬೆಲೆ, ಸಮರ್ಪಕ ಪೂರೈಕೆಯ ಕೊರತೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ದೌರ್ಜನ್ಯವನ್ನು ಖಂಡಿಸಿ ಸೋಮವಾರ ನಗರದ ತಾಲ್ಲೂಕು ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಸಂಘದ ವಿಭಾಗೀಯ ರಾಜ್ಯ ಉಪಾಧ್ಯಕ್ಷ ಟಿ. ಲಕ್ಷ್ಮೀನಾರಾಯಣರೆಡ್ಡಿ, ಕಳೆದ 50-60 ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರ ಮೇಲೆ ವಿನಾಕಾರಣ ದೌರ್ಜನ್ಯ ಎಸಗಿ ದಾವೆ ಹೂಡುತ್ತಿರುವ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಬೆಸ್ಕಾಂ ಇಲಾಖೆಯ ಅವೈಜ್ಞಾನಿಕ ಧೋರಣೆಯನ್ನು ಟೀಕಿಸಿದ ಅವರು, ಕೊಳವೆಬಾವಿ ವಿದ್ಯುತ್ ಸಂಪರ್ಕಕ್ಕಾಗಿ 3 ರಿಂದ 4 ಲಕ್ಷ ರೂಪಾಯಿ ವಸೂಲಿ ಮಾಡಲಾಗುತ್ತಿದೆ ಮತ್ತು ಸುಟ್ಟ ವಿದ್ಯುತ್ ಪರಿವರ್ತಕವನ್ನು 24 ಗಂಟೆಯೊಳಗೆ ದುರಸ್ತಿ ಮಾಡುವ ಬದಲು ರೈತರಿಂದ ಹಣಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂದು ಆರೋಪಿಸಿದರು.
ಜಿಲ್ಲಾಧ್ಯಕ್ಷ ಟಿ.ಕೆ. ಅರುಣ್ಕುಮಾರ್ ಮಾತನಾಡಿ, ಬುಡಗವಾರಹಳ್ಳಿ, ಎ. ನಕ್ಕಲಹಳ್ಳಿ ಹಾಗೂ ದಾಸಾರ್ಲಹಳ್ಳಿ ಗ್ರಾಮಗಳ ಸುಮಾರು 300 ಎಕರೆ ಜಮೀನಿನಲ್ಲಿ ದಶಕಗಳಿಂದ ಕೃಷಿ ಮಾಡುತ್ತಿರುವ ರೈತರನ್ನು ಬಲವಂತವಾಗಿ ಒಕ್ಕಲೆಬ್ಬಿಸುತ್ತಿರುವುದನ್ನು ತಡೆಯಬೇಕು ಎಂದು ಆಗ್ರಹಿಸಿದರು. ಜೊತೆಗೆ, ಗೋಣಿಮರದಹಳ್ಳಿ ಗ್ರಾಮದಲ್ಲಿ ಸರ್ಕಾರಿ ರಸ್ತೆ ಕಬಳಿಸಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ನಮೂನೆ 53 ಮತ್ತು 57 ಅರ್ಜಿ ಸಲ್ಲಿಸಿರುವ ರೈತರಿಗೆ ಶೀಘ್ರವೇ ಮಂಜೂರಾತಿ ಪತ್ರ ವಿತರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಗೂ ಮುನ್ನ ರೈತರು ನಗರದ ಬಸ್ ನಿಲ್ದಾಣದಿಂದ ತಾಲ್ಲೂಕು ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಕೋಟೆ ಚನ್ನೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮಾಂಜಿ, ಈಶ್ವರಪ್ಪ, ತಾಲ್ಲೂಕು ಅಧ್ಯಕ್ಷ ಎಸ್.ಎಂ. ರವಿಪ್ರಕಾಶ್ ಸೇರಿದಂತೆ ನೂರಾರು ರೈತರು ಭಾಗವಹಿಸಿದ್ದರು.








