Sidlaghatta : ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್.ಪಿ.ಎಸ್) ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ (ಓ.ಪಿ.ಎಸ್) ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಸರ್ಕಾರಿ ನೌಕರರು ಬೆಂಗಳೂರಿಗೆ ತೆರಳಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಹಾಗೂ ಶಿಡ್ಲಘಟ್ಟ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ಅವರ ನೇತೃತ್ವದಲ್ಲಿ ನೌಕರರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.
ನಗರದ ಕೋಟೆ ವೃತ್ತದಲ್ಲಿ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿದ ಕೆ.ಎನ್. ಸುಬ್ಬಾರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಹಲವು ವರ್ಷಗಳ ಬೇಡಿಕೆಗಳನ್ನು ಸರ್ಕಾರ ಶೀಘ್ರ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ವ್ಯವಸ್ಥೆ ಜಾರಿಗೊಳಿಸಬೇಕು. ಎನ್.ಪಿ.ಎಸ್ ರದ್ದುಪಡಿಸಿ ಓ.ಪಿ.ಎಸ್ ಜಾರಿಗೆ ತರಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಪಂದಿಸುವ ವಿಶ್ವಾಸವಿದೆ. ಇದೇ ಉದ್ದೇಶದಿಂದ ರಾಜ್ಯಮಟ್ಟದ ಹಕ್ಕೊತ್ತಾಯ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವೂ ವಿತರಿಸಲಾಗುವುದು ಎಂದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ವಸಂತ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಂದರಾಚಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ತನ್ವೀರ್ ಅಹ್ಮದ್, ಮಧುಸೂದನ್, ರಾಜ್ಯ ಪರಿಷತ್ ಸದಸ್ಯ ಟಿ.ಟಿ. ನರಸಿಂಹಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ. ವೆಂಕಟರೆಡ್ಡಿ, ಎನ್.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಕಾರ್ಯದರ್ಶಿ ನರಸಿಂಹರಾಜು ಹಾಜರಿದ್ದರು.
In English: Government employees from Sidlaghatta taluk travelled to Bengaluru to join a state-level protest by the Karnataka State Government Employees Association, demanding scrapping of the New Pension Scheme (NPS) and restoration of the Old Pension Scheme (OPS), along with pay parity with central government employees.








