Home News ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

0
Sidlaghatta Jangamakote Govt School Reopen

Jangamakote, Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ 2025 – 26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಲ್ಲಿ ಹೆಚ್ಚು ಅಂಕ ಪಡೆದವರಿಗೆ 1 ಲಕ್ಷ ರೂ ನಗದು ಬಹುಮಾನ, ದ್ವಿತೀಯ ಬಹುಮಾನ 50,000 ತೃತೀಯ ಬಹುಮಾನ 25,000 ನಗದು ಹಣವನ್ನು ತಮ್ಮ ವೇತನದಲ್ಲಿ ಪಾವತಿಸಲಾಗುವುದು ಎಂದು ಶಾಸಕ ಮೇಲೂರು ರವಿಕುಮಾರ್ ಘೋಷಣೆ ಮಾಡಿದರು.

ತಾಲ್ಲೂಕಿನ ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ಸ್‌ ಬುಕ್, ಸಮವಸ್ತ್ರ ಹಾಗೂ ಲೇಖನ ಸಾಮಗ್ರಿಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆಗಾಗಿ ಅನೇಕ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಶಿಡ್ಲಘಟ್ಟ ತಾಲ್ಲೂಕು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕು ಎಂಬ ಆಸೆಯಿಂದ ಮತ್ತು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಮ್ಮ ವಿದ್ಯಾರ್ಥಿಗಳು ಉನ್ನತ ಸಾಧನೆ ಮಾಡಬೇಕು ಎಂಬ ಉದ್ದೇಶದಿಂದ ಅವರನ್ನು ಪ್ರೋತ್ಸಾಹಿಸುವ ಸಲುವಾಗಿ ನಗದು ಬಹುಮಾನವನ್ನು ಘೋಷಣೆ ಮಾಡಲಾಗಿದೆ. ತಮ್ಮ ವಾರ್ಷಿಕ ಸಂಪೂರ್ಣ ವೇತನ ₹33 ಲಕ್ಷವನ್ನು ಶಿಡ್ಲಘಟ್ಟದ ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣಕ್ಕಾಗಿ ಮೀಸಲಿಡಲಾಗಿದೆ ಎಂದರು.

ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಶಿಕ್ಷಕರು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆಯನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಗಮನ ಹರಿಸಬೇಕು. ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗೆ ತೆರಳಿ ಸರ್ಕಾರಿ ಶಾಲೆಯಲ್ಲಿ ಮಕ್ಕಳನ್ನು ಕರೆತರುವ ಕೆಲಸವನ್ನು ಮಾಡಬೇಕು. ಉಕ್ಕು ಮತ್ತು ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮೂಲಕ ಸಿ.ಎಸ್‌.ಆರ್ ನಿಧಿಯಿಂದ ₹10 ಕೋಟಿ ಅನುದಾನ ನೀಡಲು ಒಪ್ಪಿಗೆ ಸಿಕ್ಕಿದ್ದು, ಶಾಲಾ ಮೂಲಸೌಕರ್ಯ ಅಭಿವೃದ್ಧಿಗೆ ತಯಾರಿ ನಡೆದಿದೆ ಎಂದು ಹೇಳಿದರು.

ಎಚ್.ಡಿ.ಡಿ ಮತ್ತು ಜೆ.ಪಿ.ಎನ್ ಟ್ರಸ್ಟ್ ವತಿಯಿಂದ ತಾಲ್ಲೂಕಿನಾದ್ಯಂತ ಇರುವ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣೆಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಎಸ್.ಎಸ್.ಎಲ್.ಸಿ ಯಲ್ಲಿ ಶಾಲೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಗೆ ಶಾಸಕ ರವಿಕುಮಾರ್ ಅವರು 5,000 ರೂ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಪಿ.ಎಲ್‌.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ಬಾರೆಡ್ಡಿ, ಜೆಡಿಎಸ್ ಯುವ ಮುಖಂಡ ತಾದೂರು ರಘು, ಗ್ರಾಮ ಪಂಚಾಯತ್ ಸದಸ್ಯ ಬಾಬು, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮಹಬೂಬ್, ಶಿಕ್ಷಕ ಪ್ರಕಾಶ್ ಹಾಜರಿದ್ದರು.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

error: Content is protected !!
Exit mobile version