Sidlaghatta, Chikkaballapur : ವಿದ್ಯಾರ್ಥಿಗಳು ಜಾಗತಿಕ ವಿಚಾರಗಳ ಜೊತೆಗೆ ಸ್ಥಳೀಯ ಕಲೆ, ಸಂಸ್ಕೃತಿ, ನೆಲ–ಜಲ ಮತ್ತು ಕನ್ನಡ ಸಾಹಿತ್ಯದ ಬಗ್ಗೆ ತಿಳಿವಳಿಕೆ ಹೊಂದುವುದು ಅತ್ಯಂತ ಅಗತ್ಯ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ನಾರಾಯಣಸ್ವಾಮಿ ಹೇಳಿದರು.
70ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಶಿಕ್ಷಣ ಇಲಾಖೆ ಆಶ್ರಯದಲ್ಲಿ ನಗರದ ಸರಸ್ವತಿ ಕಾನ್ವೆಂಟ್ ಶಾಲೆಯಲ್ಲಿ ಶನಿವಾರ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ನಾಡು–ನುಡಿ ಲಿಖಿತ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಯಿತು. ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿ ಮಾತನಾಡಿದ ನಾರಾಯಣಸ್ವಾಮಿ ಅವರು, “ಈ ರೀತಿಯ ಸ್ಪರ್ಧೆಗಳು ಮಕ್ಕಳಲ್ಲಿ ನಮ್ಮ ನಾಡು, ನುಡಿ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆ ಬಗ್ಗೆ ಆಳವಾದ ಜ್ಞಾನವನ್ನು ಬೆಳೆಸುತ್ತವೆ. ಪಾಠ್ಯಪುಸ್ತಕದ ಹೊರತಾಗಿ ವಿದ್ಯಾರ್ಥಿಗಳು ತಮ್ಮ ಮೂಲಗಳನ್ನು ಅರಿಯುವಲ್ಲಿ ಈ ಸ್ಪರ್ಧೆಗಳು ಮಹತ್ವದ ಪಾತ್ರ ವಹಿಸುತ್ತವೆ,” ಎಂದು ಹೇಳಿದರು. ವಿದ್ಯಾರ್ಥಿಗಳು ಕೇವಲ ಸಾಮಾನ್ಯ ಜ್ಞಾನವಷ್ಟೇ ಅಲ್ಲದೆ, ತಮ್ಮ ಸಾಂಸ್ಕೃತಿಕ ಗುರುತಿನ ಬಗ್ಗೆ ತಿಳಿದುಕೊಳ್ಳುವುದು ಅತ್ಯಂತ ಅಗತ್ಯ ಎಂದು ಅವರು ಹೇರಳವಾಗಿ ಹೇಳಿದ್ದಾರೆ.
ನಗರದ ಶ್ರೀ ಸರಸ್ವತಿ ಕಾನ್ವೆಂಟ್, ದಿಬ್ಬೂರಹಳ್ಳಿಯ ಎಸ್.ಎಂ.ವಿ ಕಾನ್ವೆಂಟ್ ಮತ್ತು ಜಂಗಮಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಲಿಖಿತ ರಸಪ್ರಶ್ನೆಯಲ್ಲಿ ತಾಲ್ಲೂಕಿನ ವಿವಿಧ ಶಾಲೆಗಳಿಂದ 110 ವಿದ್ಯಾರ್ಥಿಗಳು ಸ್ಪರ್ಧಿಸಿದರು. ವಿದ್ಯಾರ್ಥಿಗಳಿಂದ ಉತ್ತಮ ಸ್ಪಂಧನೆ ದೊರೆತಿದ್ದು, ಎಲ್ಲಾ ಸ್ಪರ್ಧಾರ್ಥಿಗಳಿಗೆ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕಾರ ನೀಡಿದ ಕನ್ನಡ ಸಾಹಿತ್ಯ ಪರಿಷತ್‌ನ ಪದಾಧಿಕಾರಿಗಳು, ಶಾಲಾ ಮುಖ್ಯಸ್ಥರು, ಶಿಕ್ಷಕರು ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿಗೆ ನಾರಾಯಣಸ್ವಾಮಿ ಧನ್ಯವಾದ ಸಲ್ಲಿಸಿದರು.
For Daily Updates WhatsApp ‘HI’ to 7406303366
