Sidlaghatta : “ಸಮಾಜದಲ್ಲಿ ಬೇರೂರಿರುವ ಮೂಢನಂಬಿಕೆ, ಮೌಢ್ಯತೆ ಮತ್ತು ಜಾತಿ ವ್ಯವಸ್ಥೆಯಿಂದ ದೂರ ಉಳಿದು, ಮಾನವರಾಗಿ ಮಾನವೀಯತೆಯಿಂದ ಬದುಕಬೇಕು ಎಂಬ ಸಂದೇಶ ನೀಡಿದ ಕುವೆಂಪು ಅವರ ಆದರ್ಶಗಳು ಇಂದಿನ ಸಮಾಜಕ್ಕೆ ಅತ್ಯಗತ್ಯ,” ಎಂದು ಗ್ರೇಡ್-2 ತಹಸೀಲ್ದಾರ್ ಕೆ.ಎನ್.ಎಂ.ಮಂಜುನಾಥ್ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಸೋಮವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ತಹಸೀಲ್ದಾರ್ ಮಂಜುನಾಥ್ ಮಾತನಾಡಿ, “ಕುವೆಂಪು ಅವರು ಯಾವುದೇ ಒಂದು ಜಾತಿಗೆ ಸೀಮಿತವಾದವರಲ್ಲ. ಅವರು ವೈಚಾರಿಕ ಪ್ರಜ್ಞೆಯ ಮೂಲಕ ವಿಶ್ವಕ್ಕೆ ಪೂರ್ಣ ಅರಳಿದ ಬದುಕಿನ ಸಂದೇಶ ನೀಡಿದ ಮಹಾನ್ ಸಂತ. ವಿದ್ಯಾರ್ಥಿಗಳು ಪುಸ್ತಕ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಅಧ್ಯಯನದ ಮೂಲಕ ಮನುಷ್ಯ ಮರುಹುಟ್ಟು ಪಡೆಯಲು ಸಾಧ್ಯ,” ಎಂದು ಸ್ಮರಿಸಿದರು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ: ಇದೇ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ವತಿಯಿಂದ ಕುವೆಂಪು ಜಯಂತಿ ಅಂಗವಾಗಿ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು. ಕುವೆಂಪು ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಇಂತಹ ಪ್ರಯತ್ನಗಳು ಶ್ಲಾಘನೀಯ ಎಂದು ಗಣ್ಯರು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಒಕ್ಕಲಿಗ ಯುವಸೇನೆ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ, ಕಸಾಪ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಎಸ್.ವಿ.ನಾಗರಾಜ್‌ರಾವ್, ಪುರುಷೋತ್ತಮ್, ಹಿರೇಬಲ್ಲ ಕೃಷ್ಣಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.








